ಮುಖ್ಯಮಂತ್ರಿ ಬದಲಾವಣೆಗೆ ವೀರಶೈವ ಮಹಾಸಭಾದ ಕೊಡಗು ಘಟಕ ವಿರೋಧ

July 21, 2021

ಮಡಿಕೇರಿ ಜು.21 : ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಪದಚ್ಯುತಗೊಳಿಸುವುದನ್ನು ವೀರಶೈವ ಲಿಂಗಾಯತ ಸಮುದಾಯ ವಿರೋಧಿಸುತ್ತದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇವಲ ಒಂದು ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ. ಇಡೀ ಕರ್ನಾಟಕ ಕಂಡ ಧೀಮಂತ ನಾಯಕರಾಗಿದ್ದು, ಇಂತಹ ವ್ಯಕ್ತಿಯನ್ನು ಪದಚ್ಯುತಿಗೊಳಿಸುವುದು ಸಮಂಜಸವಲ್ಲ ಎಂದರು.
ಈಗಾಗಲೇ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿಗಳ ಬೆಂಬಲಕ್ಕೆ ನಿಂತಿದ್ದು, ರಾಷ್ಟ್ರೀಯ ಅಧ್ಯಕ್ಷರ ನಿರ್ಧಾರಕ್ಕೆ ಸಮುದಾಯದ ಜನರು ಬದ್ಧರಾಗಿರುತ್ತೇವೆ. ರಾಜಕೀಯದಲ್ಲಿ ಭಿನ್ನಭಿಪ್ರಾಯ ಸಹಜ, ಅದನ್ನು ಪಕ್ಷದ ವರಿಷ್ಠರು ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬೇಕು. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿದ್ದು, ಅವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ ಗೌರವದಿಂದ ಕಾಣಬೇಕು ಎಂದು ತಿಳಿಸಿದರು.
ಕೋವಿಡ್ ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಯುವಕರನ್ನು ನಾಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದು, ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪಕ್ಷದ ವರಿಷ್ಠರು ಅವಕಾಶ ಕಲ್ಪಿಸಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವ ಮೂರ್ತಿ, ಖಜಾಂಚಿ ಉದಯ ಕುಮಾರ್, ನಿರ್ದೇಶಕ ಶುಭಶೇಖರ್ ಉಪಸ್ಥಿತರಿದ್ದರು.

error: Content is protected !!