ಕೊಡಗು : ನೇಮಕವಾಗಿದ್ದು 31 ತಜ್ಞ ವೈದ್ಯರು : ಕರ್ತವ್ಯಕ್ಕೆ ಹಾಜರಾಗಿದ್ದು ಕೇವಲ 9 ಮಂದಿ

14/09/2021

ಮಡಿಕೇರಿ ಸೆ.14 : ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಖಾಲಿ ಇದ್ದ 31 ತಜ್ಞ ವೈದ್ಯರನ್ನು ನೇಮಕ ಮಾಡಲಾಗಿತ್ತು. ಆದರೆ ಇವರುಗಳಲ್ಲಿ 9 ಮಂದಿ ಮಾತ್ರ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಎಂಎಲ್‌ಸಿ ಶಾಂತೆಯoಡ ವೀಣಾಅಚ್ಚಯ್ಯ ಅವರು ಕೊಡಗಿನಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಕುರಿತು ಗಮನಾರ್ಹ ಪ್ರಶ್ನೆಯನ್ನು ಕೇಳಿದ ಸಂದರ್ಭ ಸಚಿವರು ಉತ್ತರಿಸಿದರು.
2021 ರ ಮೇ ತಿಂಗಳಿನಲ್ಲಿ ವಿಶೇಷ ನೇರ ನೇಮಕಾತಿ ಸಮಿತಿ ಮೂಲಕ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಖಾಲಿ ಇದ್ದ 31 ತಜ್ಞ ವೈದ್ಯರನ್ನು ನೇಮಕ ಮಾಡಲಾಗಿತ್ತು. ಆದರೆ 9 ತಜ್ಞ ವೈದ್ಯರುಗಳು ಮಾತ್ರ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ ಎಂದು ಸಚಿವರು ಹೇಳಿದರು.
ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬಂದಿರುವ 4 ತಜ್ಞ ವೈದ್ಯರನ್ನು ಜಿಲ್ಲೆಯಲ್ಲಿರುವ ಆಸ್ಪತ್ರೆಗಳಿಗೆ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 29 ತಜ್ಞ ವೈದ್ಯರ ಹುದ್ದೆಗಳು ಖಾಲಿ ಇವೆ. ತಜ್ಞರನ್ನು ನೇಮಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ.ಸುಧಾಕರ್ ವಿವರಿಸಿದರು.