ಕೊಡಗಿನಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿ

17/09/2021

ಮಡಿಕೇರಿ ಸೆ.17 : ಶುಕ್ರವಾರ ಕೋವಿಡ್ ಲಸಿಕಾ ಅಭಿಯಾನವು ಜಿಲ್ಲೆಯಲ್ಲಿ 122 ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು. ಪ್ರಥಮ ಹಂತದ ಕೋವಿಡ್ ಲಸಿಕೆ ಪಡೆಯದಿರುವವರು ಮೇಳ ಸಂದರ್ಭದಲ್ಲಿ ಕೋವಿಡ್ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಆವರು ನಗರದ ಓಂಕಾರ ಸದನದಲ್ಲಿನ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ನಿರೋಧಕ ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ ಎಂದರು.
ಕೊಡಗು ಜಿಲ್ಲೆಗೆ 20 ಸಾವಿರ ಲಸಿಕೆ ಗುರಿಯಲ್ಲಿ, 15,300 ಮಂದಿ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ ಅವರು ತಿಳಿಸಿದ್ದಾರೆ.
ಕೋವಿಡ್-19 ಸಂಬoಧಿಸಿದoತೆ ಯಾವುದೇ ರೀತಿಯ ಅತಂಕ ಪಡುವ ಅವಶ್ಯಕತೆ ಇಲ್ಲ, ಆದರೆ ಪ್ರತಿಯೊಬ್ಬರೂ ಮುನ್ನೆಚರಿಕೆ ವಹಿಸಬೇಕು, ಜೊತೆಗೆ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ಪ್ರಥಮ ಹಂತದ ಡೋಸ್ ಅನ್ನು ಶೇ.86 ರಷ್ಟು ಪ್ರಗತಿ ಸಾಧಿಸಲಾಗಿದೆ. ಶೇ.100 ರಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆ ಮುಂದಾಗಿದೆ, ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದರು.
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 18 ಡೆಂಗ್ಯು, 1 ಚಿಕನ್ ಗುನ್ಯ ಪ್ರಕರಣ ವರದಿಯಾಗಿದೆ ಎಲ್ಲರೂ ಗುಣಮುಖರಾಗಿದ್ದಾರೆ. ಕಳೆದ 7 ದಿನಗಳಲ್ಲಿ 8 ಮ್ಕಕಳಿಗೆ ಕೋವಿಡ್-19 ಬಂದಿದ್ದು ಎಲ್ಲಾ ಮಕ್ಕಳು ಗುಣಮುಖರಾಗಿದ್ದಾರೆ ಎಂದರು.
ಜ್ವರ ಶೀತ ಕೆಮ್ಮು ಯಾವುದೇ ರೀತಿಯ ಲಕ್ಷಣಗಳು ಕಂಡುಬAದಲ್ಲಿ ಹತ್ತಿತರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕೋರಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಕೊವಿಡ್-19 ಲಸಿಕಾ ಅಭಿಯಾನ ಯಶಸ್ವಿಗೊಳಿಸಲಾಗಿದೆ ಎಂದು ಅವರು ಹೇಳಿದರು.