ಅರುವತ್ತೋಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ನಿಧನ : ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಒತ್ತಾಯ

17/10/2021

ಮಡಿಕೇರಿ ಅ.17 : ಅರುವತ್ತೋಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ಎಚ್.ಆರ್.ರಮ್ಯ (28) ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಕೈಕೇರಿ ಗ್ರಾಮದಲ್ಲಿ ವಾಸವಿದ್ದ ಇವರು, ಅ.11 ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಾಯಿ ಮನೆಯಲ್ಲಿದ್ದಳು.
ಶನಿವಾರ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡು ಮತ್ತೆ ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ರಮ್ಯ ಸಹೋದರ ವಿನೋದ್ ದೂರು ದಾಖಲಿಸಿದ್ದಾರೆ.  ಮೊದಲ ಪತಿಯಿಂದ ದೂರವಾಗಿದ್ದ ರಮ್ಯಳನ್ನು ಪಾಲಿಬೆಟ್ಟದ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ ಡೆತ್ ನೋಟ್ ನಲ್ಲಿ ಈ ಬಗ್ಗೆ ರಮ್ಯ ಉಲ್ಲೇಖಿಸಿದ್ದಾಳೆ ಎಂದು ತಿಳಿದು ಬಂದಿದೆ. ಪಾಲಿಬೆಟ್ಟದ ವ್ಯಕ್ತಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.