ಕೊಡಗು : ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು

22/10/2021

ಮಡಿಕೇರಿ ಅ.22 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಕ್ಕಳೊಂದಿಗೆ ಇದ್ದು ನಿರಂತರ ಹೋರಾಟ ನಡೆಸಲು ನಿರ್ಧರಿಸಿರುವ ಕೊಡಗು ಜಿಲ್ಲೆಯ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆಯಲು ಕರೆ ನೀಡಿದೆ.
ಅ.29ರ ವರೆಗೆ ಕಪ್ಪು ಪಟ್ಟಿ ಧರಿಸಿ ಶೈಕ್ಷಣಿಕ ಚಟುವಟಿಕೆ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.
ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದೇ ಇದ್ದಲ್ಲಿ ಅ.30 ರಿಂದ ನ.10ರ ವರೆಗೆ ಮಧ್ಯಾಹ್ನದ ಬಿಸಿಯೂಟದ (ಎಂ.ಡಿ.ಎA) ಮಾಹಿತಿಯನ್ನು ಆಪ್‌ಡೆಟ್ ಮಾಡುವುದಿಲ್ಲ, ಇದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ತರಗತಿ ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಸಮಿತಿ ಮಾಹಿತಿ ನೀಡಿದೆ.
::: ಬೇಡಿಕೆಗಳು :::
ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಶಿಕ್ಷಕರಿಗೆ 15, 20, 25 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗೆ ಪರಿಹಾರ, ದೈಹಿಕ ಶಿಕ್ಷಕರ ಸಮಸ್ಯೆಗೆ ಸ್ಪಂದನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ಒತ್ತಾಯಿಸಿದ್ದಾರೆ.