ಕನ್ನಡ ಜಾಗೃತಿ ಸಮಿತಿ : ವಿವಿಧ ಸ್ಪರ್ಧೆಗಳಲ್ಲಿ ಪ್ರತಿಭೆ ಪ್ರದರ್ಶಿಸಿದ ವಿದ್ಯಾರ್ಥಿಗಳು

23/11/2021

ಮಡಿಕೇರಿ ನ.23 : ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು, ಕನ್ನಡ ನಾಡು ನುಡಿ ಕಟ್ಟಿ ಬೆಳೆಸುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಅವರು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಲು ಕನ್ನಡ ಜಾಗೃತಿ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳು ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಯುವ ಜನರು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು. ಸಾಹಿತ್ಯದ ಅರಿವು ಪ್ರತಿಯೊಬ್ಬರಲ್ಲಿ ಇದ್ದಾಗ ಭಾಷೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷರಾದ ಎಸ್.ಮಹೇಶ್ ಅವರು ಮಾತನಾಡಿ ವಿದ್ಯಾರ್ಥಿಗಳು ಚಿಕ್ಕಂದಿನಿoದಲೇ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸಾಹಿತ್ಯ ಅಭಿರುಚಿ ಬೆಳೆಯಲು ಸಾಧ್ಯ ಎಂದರು.
ಕನ್ನಡ ಜಾಗೃತಿ ಸಮಿತಿಯ ತಾಲ್ಲೂಕು ಸದಸ್ಯರಾದ ಭಾರತಿ ರಮೇಶ್(ಮಡಿಕೇರಿ), ಇ.ರಾಜು(ಕುಶಾಲನಗರ), ತಾಲ್ಲೂಕು ಕರ್ನಾಟಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ರವಿಗೌಡ ಅವರು ಮಾತನಾಡಿದರು.
ಸರ್ಕಾರಿ ನೌಕರರ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ರೇವತಿ ರಮೇಶ್, ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲರಾದ ನಳಿನಿ ಇತರರು ಇದ್ದರು. ಕಡ್ಲೇರ ತುಳಸಿ ಮೋಹನ್ ನಿರೂಪಿಸಿದರು. ಭಾರತಿ ರಮೇಶ್ ಸ್ವಾಗತಿಸಿದರು. ರೇವತಿ ರಮೇಶ್ ವಂದಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರಿಗೆ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.