ಮಡಿಕೇರಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ ದಿನ’ ಆಚರಣೆ

06/12/2021

ಮಡಿಕೇರಿ ಡಿ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಪರಿನಿರ್ವಾಣ ದಿನ’ ಕಾರ್ಯಕ್ರಮವು ನಡೆಯಿತು.

ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆದ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶ್ರೇಷ್ಠ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೂಡಿಗೆ ಡಯಟ್ ಪ್ರಾಂಶುಪಾಲರಾದ ಕೆ.ವಿ.ಸುರೇಶ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಡಯಟ್ ಪ್ರಾಂಶುಪಾಲರಾದ ಕೆ.ವಿ.ಸುರೇಶ್ ಅವರು ಮುಂದಿನ ಪೀಳಿಗೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪ್ರೇರಣಾದಾಯಕವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ವ್ಯಕ್ತಿಯ ಅಭಿವೃದ್ಧಿ ಮತ್ತು ರಾಷ್ಟ್ರದ ಅಭ್ಯುದಯ ಸಾಧ್ಯ ಎಂದು ಅಂಬೇಡ್ಕರ್ ನಂಬಿದ್ದರು ಎಂದು ಹೇಳಿದರು.
ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಯ ಫಲವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಕಾರಣೀಭೂತರಾದರು. ತಮ್ಮ ಪ್ರಖರ ಓದು ಮತ್ತು ಅಧ್ಯಯನ ಶೀಲತೆಯಿಂದ ಸಮಾಜದ ಹಿತ ಮತ್ತು ಶೋಷಿತ ವರ್ಗದ ಧ್ವನಿಯಾಗಿ ಅಂಬೇಡ್ಕರ್ ದುಡಿದಿದ್ದಾರೆ ಎಂದು ಡಯಟ್ ಪ್ರಾಂಶುಪಾಲರು ತಿಳಿಸಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಭಾರತದ ಪ್ರಥಮ ಕಾನೂನು ಮಂತ್ರಿಯಾಗಿ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಭಾರತ ಸಂವಿಧಾನ ರಚಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಗಲಿರುಳು ಶ್ರಮಿಸಿದ್ದಾರೆ. ಭಾರತದ ಎಲ್ಲಾ ವರ್ಗದ ಕಟ್ಟ ಕಡೆಯ ಜನರಿಗೂ ಸಂವಿಧಾನದ ಸೌಲಭ್ಯಗಳು ತಲುಪುವಲ್ಲಿ ಶ್ರಮಿಸಿದ್ದಾರೆ ಎಂದು ಕೆ.ವಿ.ಸುರೇಶ್ ಅವರು ನುಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಜ್ಞಾನಿಯಾಗಿ ಹಾಗೂ ಭಾರತ ಭಾಗ್ಯವಿಧಾತರಾಗಿ ಸದಾ ಕಣ್ಣುಮುಂದೆ ಇದ್ದಾರೆ. ಇವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಎಲ್ಲರಂತೆ ಬದುಕಬೇಕು. ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಭಿವೃದ್ಧಿ ಸಾಧಿಸಬೇಕು ಎಂಬ ಕನಸನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೊಂದಿದ್ದರು ಎಂದು ತಿಳಿಸಿದರು.
ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ, ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡಿದ್ದರು. ಮೂಕನಾಯಕ, ಬಹಿಷ್ಕøತ ಭಾರತ ಪತ್ರಿಕೆಗಳನ್ನು ಹೊರತಂದಿದ್ದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೂಲಕ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಿದರು ಎಂದು ಕೆ.ವಿ.ಸುರೇಶ್ ಅವರು ಸ್ಮರಿಸಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಭಟ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕಾಂತರಾಜು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಮಮತ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಇತರರು ಇದ್ದರು.