ಅಗತ್ಯ ಮುನ್ನೆಚ್ಚರಿಕೆ ವಹಿಸಿ : ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಟ್ಟುನಿಟ್ಟಿನ ಸೂಚನೆ

14/01/2022

ಮಡಿಕೇರಿ ಜ.14 : ರಾಜ್ಯದ್ಯಾಂತ ಕೋವಿಡ್ ಮೂರನೇ ಅಲೆ ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ನಿರ್ಲಕ್ಷö್ಯವಹಿಸದೆ, ಗಂಭೀರವಾಗಿ ಪರಿಗಣಿಸಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್-19 ಮೂರನೇ ಅಲೆ ಓಮೈಕ್ರಾನ್ ವೇಗವಾಗಿ ಹರಡುವುದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ‘ಗ್ರಾ.ಪಂ.ಮಟ್ಟದಲ್ಲಿ ಕಾರ್ಯಪಡೆ’ಯನ್ನು ಬಲಪಡಿಸಿ ಗ್ರಾ.ಪಂ.ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್-19 ನಿಯಂತ್ರಣ ಸಂಬಂಧ ತಾಲ್ಲೂಕು ಮಟ್ಟದಲ್ಲಿಯೂ ಸಹ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಂತೆ ಸಚಿವರು ಸೂಚಿಸಿದರು.
ಪ್ರವಾಸಿ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಎರಡು ಡೋಸ್ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಗಡಿ ಪ್ರದೇಶದ ಚೆಕ್‌ಪೋಸ್ಟ್ಗಳಲ್ಲಿ ತಪಾಸಣೆ ಮಾಡಬೇಕು ಎಂದು ಸಚಿವರು ಹೇಳಿದರು.
ಕೋವಿಡ್ ಲಸಿಕೆ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು 15 ವರ್ಷ ಮೇಲ್ಪಟ್ಟವರೆಲ್ಲರಿಗೂ ಪ್ರಥಮ ಮತ್ತು ದ್ವಿತೀಯ ಡೋಸ್ ಆಗಿರಬೇಕು ಎಂದು ಅವರು ಸೂಚಿಸಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಹಂತದಲ್ಲಿ ಎಷ್ಟು ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು. ಈ ಕುರಿತು ಮಾತನಾಡಿದ ಸಚಿವರು ಮೂರು ದಿನದಲ್ಲಿ ಅರ್ಹರೆಲ್ಲರಿಗೂ ಲಸಿಕೆ ನೀಡುವಂತೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು 15 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹರಿಗೂ ಕೋವಿಡ್-19 ನಿಯಂತ್ರಣ ಲಸಿಕೆ ನೀಡಲಾಗುವುದು ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಗಡಿ ಪ್ರದೇಶದಲ್ಲಿ ಹೆಚ್ಚಿನ ಜಾಗೃತಿ ವಹಿಸುವುದರ ಜೊತೆಗೆ ಹೊರ ದೇಶಗಳಿಂದ ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರ ಬಗ್ಗೆಯೂ ಹೆಚ್ಚಿನ ನಿಗಾವಹಿಸಬೇಕು. ಕೋವಿಡ್-19 ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಆರೈಕೆ ಕೇಂದ್ರಗಳಾಗಿ ಮಾಡಬಾರದು. ವಸತಿ ಶಾಲೆಗಳಿಗೆ ರಜೆ ನೀಡಿದರೆ ಮಾತ್ರ ಅನಿವಾರ್ಯ ಇದ್ದಲ್ಲಿ ಮಾತ್ರ ಬಳಸಿಕೊಳ್ಳಿ ಎಂದು ಶಾಸಕರು ಸಲಹೆ ಮಾಡಿದರು.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪ್ರತೀ ತಾಲ್ಲೂಕಿನಲ್ಲಿ ತಲಾ 1 ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗುತ್ತದೆ. ಶಾಲಾ ಕಾಲೇಜಿಗೆ ರಜೆ ನೀಡಿದ್ದಲ್ಲಿ ಮಾತ್ರ ವಸತಿ ಶಾಲೆಗಳನ್ನು ಬಳಸಿಕೊಳ್ಳಲಾಗುವುದು ಎಂದು ಗಮನಕ್ಕೆ ತಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗಳಲ್ಲಿ 25 ಐಸಿಯು ಹಾಸಿಗೆಗೆ ಅನುಮೋದನೆ ದೊರೆತ್ತಿದೆ ಎಂದು ಅವರು ಮಾಹಿತಿ ನೀಡಿದರು.