ಮಡಿಕೇರಿ ಜ.25 : ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಣರಾಜ್ಯೋತ್ಸವದ ದಿನವಾದ ಜ.26 ರಂದು ಪೊನ್ನಂಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ತಿಳಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾ ಸಂಚಾಲಕ ರಜನಿಕಾಂತ್ ಹಾಗೂ ಹಿರಿಯ ಮುಖಂಡ ಹೆಚ್.ಎಸ್.ಕೃಷ್ಣಪ್ಪ ಪೊನ್ನಂಪೇಟೆಯ ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ನಡೆಸಲಾಗುವುದು. ನಂತರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ದಲಿತರ ಪರವಾಗಿ ನಿರಂತರ ಧರಣಿ ಸತ್ಯಾಗ್ರಹಳು ನಡೆಯುತ್ತಿದ್ದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲವೆಂದು ಆರೋಪಿಸಿರುವ ಅವರು, ಈ ಬಾರಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.








