ಮಡಿಕೇರಿ ಜ.31 : ಪದ್ಮಶ್ರೀ ಪುರಸ್ಕೃತ ಕೊಡಗಿನ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಫೆ.3 ರಂದು ಸನ್ಮಾನಿಸಿ ಗೌರವಿಸಲಾಗುವುದೆಂದು ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.45 ಗಂಟೆಗೆ ರಾಣಿ ಮಾಚಯ್ಯ ಅವರನ್ನು ನಗರದ ಎವಿ ಶಾಲೆ ಬಳಿಯಿಂದ ತೆರೆದ ಜೀಪ್‍ನಲ್ಲಿ ಮೆರವಣಿಗೆ ಮೂಲಕ ಕರೆ ತಂದು ಕೊಡವ ಸಮಾಜದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಕೊಡವ ಸಮಾಜದ ಅಧೀನದಲ್ಲಿರುವ 12 ಕೇರಿಗಳ ಸದಸ್ಯರು, ಪೊಮ್ಮಕ್ಕಡ ಕೂಟದ ಪ್ರಮುಖರು ಪಾಲ್ಗೊಳ್ಳಲಿದ್ದು, ಜನಾಂಗ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.
ಜಾನಪದ ಕ್ಷೇತ್ರದಲ್ಲಿ ಕೊಡಗಿನ ಸಂಸ್ಕೃತಿಯನ್ನು ದೇಶ ವಿದೇಶದಲ್ಲಿ ಪಸರಿಸಿದ ಕೀರ್ತಿ ರಾಣಿಮಾಚಯ್ಯ ಅವರಿಗೆ ಸಲ್ಲುತ್ತದೆ. ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವ ಸಲ್ಲಿಸುತ್ತಿರುವುದು ಕೊಡಗಿಗೆ ಹಾಗೂ ಜನಾಂಗಕ್ಕೆ ಹೆಮ್ಮೆಯ ವಿಚಾರ ಎಂದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಹಾಗೂ ನಿರ್ದೇಶಕಿ ಕಾಂಡೇರ ಲಲ್ಲು ಕುಟ್ಟಪ್ಪ ಉಪಸ್ಥಿತರಿದ್ದರು.







