Advertisement
10:02 AM Sunday 3-December 2023

ಮಾ.1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

23/02/2023

ಮಡಿಕೇರಿ ಫೆ.23 : ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮಾ.1 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಶಾಖೆ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವು ಅವರ ನ್ಯಾಯಸಮ್ಮತ ಹಕ್ಕಾಗಿದೆ. ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನೌಕರರ ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದರೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ರಾಜ್ಯದ 2023-24ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಫೆ.21 ರಂದು ನಡೆಸಿದ ಸಭೆಯ ನಿರ್ಣಯದಂತೆ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಮಾ.1 ರಂದು ರಾಜ್ಯದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ಪರಿಷ್ಕøತ ವೇತನ, ಭತ್ಯೆ, 7ನೇ ವೇತನ ಆಯೋಗದಿಂದ ಶೀಘ್ರ ಮಾಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಮೊದಲು ಶೇ.40 ರಷ್ಟು ಫಿಟ್‍ಮೆಂಟ್ ಸೌಲಭ್ಯ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು, ಕರ್ನಾಟಕದಲ್ಲಿ ಎನ್‍ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಂ.ಸಿ.ಅರುಣ್ ಕುಮಾರ್, ಗೌರವಾಧ್ಯಕ್ಷ ಎಸ್.ಟಿ.ಶಮ್ಮಿ, ಖಜಾಂಚಿ ಪಿ.ಡಿ.ರಾಜೇಶ್ ಉಪಸ್ಥಿತರಿದ್ದರು.