ಯುವ ಮತದಾರರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಮಡಿಕೇರಿ ಫೆ.27 : ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್ ಅರಿವು ಕುರಿತು ಪ್ರಾತ್ಯಕ್ಷಿಕೆಯು ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ನಗರದ ಉಪ ವಿಭಾಗಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆದವರು ಪ್ರಾತ್ಯಕ್ಷಿಕೆಯ ಅವಕಾಶವನ್ನು ಬಳಸಿಕೊಳ್ಳಬೇಕು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಈ ಅಣಕು ಮತದಾನ ನಡೆಯಲಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.
ಈಗಾಗಲೇ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಅಣಕು ಪ್ರದರ್ಶನವು ಜಿಲ್ಲಾಧಿಕಾರಿ ಕಚೇರಿ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದರು. ಹಾಗೆಯೇ ಮತಗಟ್ಟೆ ವ್ಯಾಪ್ತಿಯಲ್ಲಿ ನಿಗದಿತ ಅವಧಿಯಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು.
18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.
ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಅವರು ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೇ.60 ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನವಾಗಲು ಅರಿವು ಮೂಡಿಸುವಂತೆ ಕೋರಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಖ್, ರಾಜಕೀಯ ಪಕ್ಷಗಳ ಪ್ರಮುಖರಾದ ಅಪ್ಪಣ್ಣ(ಬಿಜೆಪಿ), ತೆನ್ನಿರಾ ಮೈನಾ(ಕಾಂಗ್ರೆಸ್), ಗುಲಾಬಿ(ಜೆಡಿಎಸ್), ತಹಶೀಲ್ದಾರರಾದ ಕಿರಣ್, ಪ್ರಶಾಂತ್, ಇತರರು ಇದ್ದರು.
