Advertisement
3:18 AM Saturday 2-December 2023

ಗೋಣಿಕೊಪ್ಪದಲ್ಲಿ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನ : ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಲು ಕರೆ

27/02/2023

ಮಡಿಕೇರಿ ಫೆ.27 : ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನವು ಮಾರ್ಚ್, 4 ಮತ್ತು 5 ರಂದು ಗೋಣಿಕೊಪ್ಪದಲ್ಲಿ ಜರುಗಲಿದ್ದು, ಎಲ್ಲಾ ಹಂತದ ಅಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಶಾಸಕ  ಕೆ.ಜಿ.ಬೋಪಯ್ಯ  ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕರು ಕನ್ನಡ ನಾಡು-ನುಡಿ, ಭಾಷೆ ಅಭಿವೃದ್ಧಿಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ಶಾಸಕರು ತಿಳಿಸಿದರು.
ಕನ್ನಡ ಭಾಷೆ, ನಾಡು-ನುಡಿ ಎಲ್ಲೆಡೆ ಪಸರಿಸುವಲ್ಲಿ ಶ್ರಮಿಸಬೇಕು. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರು ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಕನ್ನಡ ನಾಡು ನುಡಿಗೆ ಜಿಲ್ಲಾಡಳಿತ ಸದಾ ಸಹಕಾರ ನೀಡುತ್ತದೆ. ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಗಳಿಗೆ ಮತ್ತಷ್ಟು ಹೆಚ್ಚಿನ ಸಹಕಾರ ಜಿಲ್ಲಾಡಳಿತ ವತಿಯಿಂದ ನೀಡಲಾಗುವುದು ಎಂದರು.
ಪೊನ್ನಂಪೇಟೆ ತಾಲ್ಲೂಕಿನ ವಿದ್ಯಾರ್ಥಿಗಳು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ 16 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಡಾ.ಎಂ.ಪಿ.ರೇಖಾ ಅವರು ವಹಿಸಲಿದ್ದಾರೆ. ಮಾರ್ಚ್, 04 ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ನಂತರ ನೆನಪಿನ ದ್ವಾರಗಳ ಉದ್ಘಾಟನೆ, ಬೆಳಗ್ಗೆ 8.45 ಗಂಟೆಗೆ ಪಾಲಿಬೆಟ್ಟ ರಸ್ತೆಯ ತಿರುವಿನಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ ಎಂದರು.

ಬೆಳಗ್ಗೆ 10.15 ಗಂಟೆಗೆ ಸಮಾರಂಭದ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿಚಾರಗೋಷ್ಠಿಗಳು, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಗೋಷ್ಠಿ, ಕೊಡಗು ದರ್ಶನ, ಕನ್ನಡ ಗೀತಾ ಗಾಯನ, ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ, ನಂತರ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ತಿಳಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಜಿ.ಪಂ. ಎಂಜಿನಿಯರ್ ನಾಗೇಂದ್ರಪ್ಪ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ನಾಗರಾಜು, ತಾ.ಪಂ.ಇಒ ಶೇಖರ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ದೊಡ್ಡೇಗೌಡ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ನಾಯಕ್, ಕೆಆರ್‍ಐಡಿಎಲ್ ಎಂಜಿನಿಯರ್ ಪ್ರಮೋದ್, ಬಿಸಿಎಂ ಇಲಾಖೆ ವ್ಯವಸ್ಥಾಪಕರಾದ ಕವಿತಾ, ಇತರರು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.