ಮಡಿಕೇರಿ : ಸರ್ಕಾರದ ಆದೇಶದ ಪ್ರತಿಯನ್ನು ದಹಿಸಿದ ಪ್ರತಿಭಟನಾಕಾರರು

ಮಡಿಕೇರಿ ಮಾ.1 : ರಾಜ್ಯ ಸರ್ಕಾರದ ಕಾರ್ಖಾನೆ ಕಾಯ್ದೆಯ ತಿದ್ದುಪಡಿ ವಿಧೇಯಕವು ಕಾರ್ಮಿಕ ಸಮುದಾಯಕ್ಕೆ ಮಾರಕವಾಗಿದೆ ಎಂದು ಆರೋಪಿಸಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಐಟಿಯು ಸಂಘಟನೆ ಆದೇಶದ ಪ್ರತಿಯನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿತು.
ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕಾರ್ಮಿಕರನ್ನು ಶೋಷಣೆಗೆ ಒಳಪಡಿಸುವ ಮೂಲಕ ರಾಜ್ಯ ಮತ್ತು ಕೇಂದ್ರ್ರ ಸರ್ಕಾರಗಳು ಬಂಡವಾಳಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿವೆ. ಇದರ ಭಾಗವಾಗಿ ಕಾರ್ಖಾನೆ ಕಾಯ್ದೆ 1948 ಕ್ಕೆ ತಿದ್ದುಪಡಿ ತರುವ ಮೂಲಕ ಅದನ್ನು ಜಾರಿಗೂ ತಂದಿದೆಯೆಂದು ಆರೋಪಿಸಿದರು.
ತಿದ್ದುಪಡಿ ವಿಧೇಯಕದ ಮೂಲಕ ದುಡಿಯುವ ಅವಧಿಯನ್ನು 8ಗಂಟೆಗೆ ಬದಲಾಗಿ ಹೆಚ್ಚುವರಿ ಮೂರು ಗಂಟೆ ಸೇರಿಸಿ 11 ಗಂಟೆಗೆ ಹೆಚ್ಚಿಸಲಾಗಿದೆ. ಇದರಿಂದ ಕಾರ್ಮಿಕ ಹೆಚ್ಚಿನ ಅವಧಿ ದುಡಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆಯೆಂದು ಆತಂಕ ವ್ಯಕ್ತಪಡಿಸಿದರು.
ತಿದ್ದುಪಡಿ ವಿಧೇಯಕದ ಮೂಲಕ ಮಹಿಳಾ ಕಾರ್ಮಿಕರನ್ನು ರಾತ್ರಿ ಪಾಳಿಯಲ್ಲೂ ದುಡಿಸಿಕೊಳ್ಳುವ ಅವಕಾಶವನ್ನು ಸರ್ಕಾರ ಒದಗಿಸಿದೆ. ದುಡಿಯುವ ಮಹಿಳೆಯರ ಸುರಕ್ಷತೆ, ಕೆಲಸದ ಭದ್ರತೆ, ಸಾರಿಗೆ, ಸೇವಾ ಸೌಲಭ್ಯಗಳಿಂದ ಮಹಿಳಾ ಕಾರ್ಮಿಕರು ವಂಚಿತರಾಗಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಕಿರುಕುಳ ಹೆಚ್ಚಾಗಿದೆ. ಕಡಿಮೆ ವೇತನಕ್ಕೆ ದುಡಿಸಿಕೊಳ್ಳಲಾಗುತ್ತಿದ್ದು, ಕೆಲಸದ ಅಭದ್ರತೆಯಿಂದಾಗಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹೀಗಿರುವಾಗ ಮಹಿಳಾ ಕಾರ್ಮಿಕರನ್ನು ರಾತ್ರಿಪಾಳಿಯಲ್ಲಿ ದುಡಿಮೆಗೆ ಹಚ್ಚುವ ಸರ್ಕಾರದ ಪ್ರಯತ್ನ ಯೋಗ್ಯವಲ್ಲವೆಂದು ಹೇಳಿದರು.
ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ ನಿಗದಿ ಪಡಿಸಿ ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಕಾರ್ಯದರ್ಶಿ ಎ.ಸಿ.ಸಾಬು, ಖಜಾಂಚಿ ಎನ್.ಡಿ. ಕುಟ್ಟಪ್ಪ, ಉಪಾಧ್ಯಕ್ಷ ರತೀಶ್ ಎ.ಎಸ್., ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿ ಜಾನಕಿ, ರುಕ್ಮ್ಮಿಣಿ, ಬಿಸಿಯೂಟ ತಯಾರಕರ ಸಂಘದ ಪದಾಧಿಕಾರಿ ರಾಣಿ, ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಹಸನಬ್ಬ, ಮೊಣ್ಣಪ್ಪ, ಉದಯ ಕುಮಾರ್, ಹಮೀದ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
