ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ ವಕೀಲರ ಭವನ ನಿರ್ಮಾಣಕ್ಕೆ ಭೂಮಿಪೂಜೆ : ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ನ್ಯಾಯ ಸಿಗುವಂತಾಗಬೇಕು

ಮಡಿಕೇರಿ ಮಾ.4 : ಸರ್ವೋಚ್ಛ ನಾಯಾಲಯದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರು ಕುಶಾಲನಗರ ಮತ್ತು ವಿರಾಜಪೇಟೆಯಲ್ಲಿ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಸೋಮವಾರಪೇಟೆಯಲ್ಲಿ ವಕೀಲರ ಭವನ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಶನಿವಾರ ನೆರವೇರಿಸಿದರು.
ಕುಶಾಲನಗರದಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಪ್ರತಿಯೊಬ್ಬರಿಗೂ ನ್ಯಾಯ ನಿಲುಕುವಂತಿರಬೇಕು. ಆ ನಿಟ್ಟಿನಲ್ಲಿ ಕುಶಾಲನಗರದ ಮುಖ್ಯ ಕೇಂದ್ರದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡುತ್ತಿರುವುದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ನ್ಯಾಯವು ಎಲ್ಲರಿಗೂ ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗಲಿ ಎಂದು ಅವರು ಆಶಿಸಿದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರು ಮಾತನಾಡಿ ತಾಲ್ಲೂಕು ಕೇಂದ್ರಗಳಲ್ಲಿ ನ್ಯಾಯಾಲಯ ಕಟ್ಟಡಗಳು ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ಅನುಕೂಲ ಆಗಲಿದೆ ಎಂದರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃoಗೇಶ್ ಅವರು ಮಾತನಾಡಿ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕುಶಾಲನಗರದ ವಕೀಲರ ಸಂಘದ ಅಧ್ಯಕ್ಷರಾದ ಆರ್.ಕೆ.ನಾಗೇಂದ್ರ ಅವರು ಮಾತನಾಡಿ ವಕೀಲರ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಲ್ಲಿ ಹಲವರ ಪರಿಶ್ರಮವಿದೆ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ, ಕರ್ನಾಟಕ ಉಚ್ಛ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಕೆ.ಎಸ್.ಭರತ್‌ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪ್ರಕಾಶ್, ಇತರರು ಇದ್ದರು.
