Advertisement
3:17 AM Saturday 2-December 2023

ಭ್ರಷ್ಟಾಚಾರ ಮುಕ್ತ ಕರ್ನಾಟಕ ಹೋರಾಟ : ಬಂದ್ ಗೆ ಕರೆ ನೀಡಿದ ಕಾಂಗ್ರೆಸ್ : ಸಿಎಂ ರಾಜೀನಾಮೆಗೆ ಆಗ್ರಹ

06/03/2023

ಮಡಿಕೇರಿ ಮಾ.6 : ಭ್ರಷ್ಟಾಚಾರ ಮುಕ್ತ ಕರ್ನಾಟಕ ಹೋರಾಟದ ಭಾಗವಾಗಿ ಮಾ.9 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕೆಪಿಸಿಸಿ ಕರೆ ನೀಡಿದೆ. ಕೊಡಗಿನಲ್ಲೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಸಾರ್ವಜನಿಕರು ಸಹಕಾರ ನೀಡಬೇಕು ಮತ್ತು ಸ್ವಯಂ ಪ್ರೇರಿತ ಬಂದ್ ಮೂಲಕ ಬೆಂಬಲ ಸೂಚಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಹಾಗೂ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಬಂದ್ ಗೆ ಕರೆ ನೀಡಿದರು. ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಮನವಿ ಮಾಡುತ್ತೇವೆ, ಯಾರ ಮೇಲೂ ಒತ್ತಡ ಹೇರುವುದಿಲ್ಲ. ಪ್ರತಿಭಟನೆ ಅಥವಾ ರಸ್ತೆ ತಡೆ ಮಾಡುವುದಿಲ್ಲ, ರಾಜ್ಯದಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರದ ವಿರುದ್ಧ ಜನರು ಕೂಡ ಜಾಗೃತರಾಗಿದ್ದು, ಬಂದ್ ಗೆ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ಕಚೇರಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಲೋಕಾಯುಕ್ತ ದಾಳಿಯಿಂದ ಇದು ಬಯಲಾಗಿದ್ದು, ಜನಪ್ರತಿನಿಧಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸಾಬೀತಾಗಿದೆ. ಶೇ.40 ಕಮಿಷನ್ ಈಗ ಶೇ.60- 70 ಕ್ಕೆ ಏರಿಕೆಯಾಗಿದೆ ಎಂದು ಟಿ.ಪಿ.ರಮೇಶ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ವಕ್ತಾರ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಉಪಸ್ಥಿತರಿದ್ದರು.