ಮಡಿಕೇರಿ ಮಾ.15 : ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿಗೆ ಆಗಮಿಸಿ ಸುಮಾರು 4 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 30 ಕ್ಕೂ ಹೆಚ್ಚು ಉದ್ಘಾಟನಾ ಕಾರ್ಯಕ್ರಮ ಮತ್ತು 15 ಕ್ಕೂ ಹೆಚ್ಚು ಶಂಕುಸ್ಥಾಪನಾ ಕಾರ್ಯಕ್ರಮವನ್ನು ಇದೇ 18 ರಂದು ಮುಖ್ಯಮಂತ್ರಿ ಅವರು ನೆರವೇರಿಸಲಿದ್ದಾರೆ. ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ 73 ಕೋಟಿ ರೂ. ವೆಚ್ಚದ ಕುಡಿಯುವ ನೀರು ಕಾಮಗಾರಿ ಯೋಜನೆಗೆ ಚಾಲನೆ ದೊರೆಯಲಿದೆ ಎಂದರು.
ಫಲಾನುಭವಿಗಳ ಸಮ್ಮೇಳನ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸುವುದರ ಜೊತೆಗೆ ಸವಲತ್ತು-ಸೌಲಭ್ಯಗಳನ್ನು ವಿತರಿಸಲಿದ್ದಾರೆ ಎಂದರು.
ಸರ್ಕಾರದ ಒಂದಲ್ಲ ಒಂದು ಕಾರ್ಯಕ್ರಮಗಳು ಬಡ ಜನರಿಗೆ ತಲುಪಿಸುವಲ್ಲಿ ಶ್ರಮಿಸಲಾಗಿದೆ. ಆ ನಿಟ್ಟಿನಲ್ಲಿ ಫಲಾನುಭವಿಗಳ ಪ್ರತಿಕ್ರಿಯೆಯನ್ನು ಪಡೆಯಲಾಗುತ್ತದೆ ಎಂದರು.







