ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತ ಎಣಿಕೆ ನಡೆಯುವ ದಿನದಂದು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೇ 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ-ಸಮಾರಂಭ, ವಾಹನ ಜಾಥ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮತ ಎಣಿಕಾ ಕೇಂದ್ರವಾದ ಮಡಿಕೇರಿಯ ಸೆಂಟ್ ಜೋಸೆಫ್ ಕಾನ್ವೆಂಟ್‍ನ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ತಂಗುವಿಕೆ ಮತ್ತು ಧ್ವನಿವರ್ಧಕ ಬಳಕೆಯನ್ನು ಸಹ ನಿಷೇಧಿಸಿದೆ.
ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್. ಎಟಿಎಂ ಭದ್ರತಾ ಸಿಬ್ಬಂದಿಗಳು ಹಾಗೂ ಮತ ಎಣಿಕಾ ಕೇಂದ್ರದ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ಆಯುಧ, ಬಂದೂಕುಗಳನ್ನು ಹೊಂದಿರುವುದಕ್ಕೆ ಅಥವಾ ಬಳಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.









