ಮಡಿಕೇರಿ ಜು.29 : ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ನಡೆದ ವಿಡಿಯೋ ಚಿತ್ರೀಕರಣ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾ ದೇಗುಲದಂತಿರುವ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರಿಗೆ ಮುಜುಗರ ಉಂಟು ಮಾಡಿದ ಈ ಪ್ರಕರಣ ಅತ್ಯಂತ ಅಮಾನವೀಯ ಮತ್ತು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದೂ ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡು ಶೌಚಾಲಯದಲ್ಲಿ ಚಿತ್ರೀಕರಣ ಮಾಡಿರುವುದನ್ನು ಗಮನಿಸಿದರೆ ಆರೋಪಿಗಳ ಹಿಂದೆ ದುಷ್ಟಶಕ್ತಿಗಳು ಕೆಲಸ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರೊಬ್ಬರು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಿದ್ದಾರೆ, ಅಲ್ಲದೆ ಮಕ್ಕಳಾಟವೆಂದು ಬಾಲಿಶ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯನ್ನು ಗಮನಿಸಿದರೆ ಆರೋಪಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆರೋಪಿಗಳ ಹಿಂದಿರುವ ಮತಾಂಧ ಶಕ್ತಿಗಳ ವಿರುದ್ಧ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಅನಿತಾ ಪೂವಯ್ಯ ಒತ್ತಾಯಿಸಿದ್ದಾರೆ.









