ಮಡಿಕೇರಿ ಸೆ.22 : ಮಡಿಕೇರಿ ದಸರಾ ಸಮಿತಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಸರಾ ಆಚರಣೆಗೆ 2 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ದಸರಾ ಜನೋತ್ಸವದ ಕುರಿತು ಚರ್ಚಿಸಿತು. 2 ಕೋಟಿ ರೂ. ಅನುದಾನ ನೀಡಿ ಸಹಕರಿಸುವಂತೆ ಕೋರಿಕೊಂಡಿತು.
ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಹಾಗೂ ನಗರಸಭಾ ಅಧ್ಯಕ್ಷರೂ ಆದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ಪ್ರಮುಖರಾದ ಟಿ.ಪಿ.ರಮೇಶ್, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.
::: ಅನುದಾನದ ವಿಶ್ವಾಸ :::
ಮುಖ್ಯಮಂತ್ರಿಗಳನ್ನು ಭೇಟಿಯಾದ ಕುರಿತು ಮಾತನಾಡಿದ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕಾವೇರಿ ವಿವಾದ ಮತ್ತು ಬರದ ಪರಿಸ್ಥಿತಿಯ ಒತ್ತಡದ ನಡುವೆಯೂ ಮುಖ್ಯಮಂತ್ರಿಗಳು ನಮ್ಮ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಸಂಭ್ರಮದ ದಸರಾ ಆಚರಣೆಗೆ ಹೆಚ್ಚಿನ ಅನುದಾನ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.









