ಮಡಿಕೇರಿ ಅ.29 : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕೊಡಗಿನ ಕೆ.ಕೆ.ಮಂಜುನಾಥ್ ಕುಮಾರ್ ಅವರನ್ನು ಕಾಂಗ್ರೆಸ್ ಅಧಿಕೃತಗೊಳಿಸಿದೆ.
ಜನಸೇವೆಗಾಗಿ ಶಿಕ್ಷಕ ವೃತ್ತಿಯನ್ನು ತೊರೆದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡ ಮಂಜುನಾಥ್ ಕುಮಾರ್, 2012 ರಲ್ಲಿ ಬಿಜೆಪಿಯ ಗಣೇಶ್ ಕಾರ್ಣಿಕ್ ಅವರ ವಿರುದ್ಧ ಸ್ಪರ್ಧಿಸಿ ಅಲ್ಪಮತಗಳಿಂದ ಸೋಲು ಅನುಭವಿಸಿದ್ದರು. ಶಿಕ್ಷಕ ಸಂಘಟನೆಗಳ ಅಧ್ಯಕ್ಷರಾಗಿ, ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದ ಸ್ಪರ್ಧಾಕಾಂಕ್ಷಿಯೂ ಆಗಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ 2024 ಜೂನ್ ನಲ್ಲಿ ನಡೆಯಲಿರುವ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮಂಜುನಾಥ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ನೈರುತ್ಯ ಶಿಕ್ಷಕರ ಕ್ಷೇತ್ರವು ಸುಮಾರು 30 ಸಾವಿರ ಶಿಕ್ಷಕ ಮತದಾರರನ್ನು ಹೊಂದಿದೆ.





































