*ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಪೊಲೀಸ್ ವಶ*

ಮಡಿಕೇರಿ ನ.19 : ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಗೋಣಿಕೊಪ್ಪ ಮತ್ತು ವಿರಾಜಪೇಟೆ ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.
ಕಂಡಂಗಾಲ ಗ್ರಾಮದ ನಿವಾಸಿ ವಿಜಯ್ ಭೀಮಯ್ಯ (39) ಎಂಬಾತನೆ ಆರೋಪಿಯಾಗಿದ್ದು, 1 ಕೆ.ಜಿ 606 ಗ್ರಾಂ ಹಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದಾಗ ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದರು.
ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಗೋವಿಂದರಾಜು, ವಿರಾಜಪೇಟೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ದಕ್ಷತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಗಾಂಜಾ ಸೇರಿದಂತೆ ಮಾದಕ ವಸ್ತುಗಳು ಮಾರಾಟವಾಗುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.
