ಬೆಂಗಳೂರು ಡಿ.5 : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು.
ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ.
ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.








