ಮಡಿಕೇರಿ ಮಾ.11 NEWS DESK : ಅಭಿವೃದ್ಧಿ ಕಾರ್ಯಗಳ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಮುಂದಿನ 4 ವರ್ಷಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಕ್ಷೇತ್ರದ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ಪಾರಾಣೆ, ಬೆಟ್ಟಗೇರಿ, ಬೇಂಗೂರು ಚೇರಂಬಾಣೆ, ಚೆಟ್ಟಿಮಾನಿ ಕುಂದಚೇರಿ, ಭಾಗಮಂಡಲ, ಅಯ್ಯಂಗೇರಿ, ಎಮ್ಮೆಮಾಡ್ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 9 ಕೋಟಿ 26 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೊಡ್ಡ ದೊಡ್ಡ ಫ್ಲೈ ಓವರ್ ಅಥವಾ ದೊಡ್ಡ ಸೇತುವೆ ನಿರ್ಮಿಸಿದರೆ ಅದು ಮಾತ್ರ ಅಭಿವೃದ್ದಿ ಎಂದೆನಿಸುವುದಿಲ್ಲ. ಗ್ರಾಮೀಣ ಭಾಗದ ಜನರ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಅದು ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಕೊಡಗಿನ ಶಾಸಕರಾಗಿ ಆಯ್ಕೆ ಆದ ನಂತರ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಆರಂಭಗೊಂಡಿದೆ. ಜನ ಬೆಂಬಲ ಇದ್ದರೆ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿ, ಇಷ್ಟು ದೊಡ್ಡ ಮೊತ್ತದ ಅನುದಾನದ ನಿರೀಕ್ಷೆ ಇರಲಿಲ್ಲ. ಆದರೆ ಎ.ಎಸ್.ಪೊನ್ನಣ್ಣ ನವರ ಸಾಮರ್ಥ್ಯ ದಿಂದ ಹೆಚ್ಚಿನ ಅನುದಾನ ಬಂದಿದೆ. ಎಲ್ಲಾ ಗ್ರಾಮಗಳಿಗೂ ಆದ್ಯತೆ ಅನುಸಾರ ಹಂಚಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಮಡಿಕೇರಿ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನೆರವಂಡ ಉಮೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ವಲಯ ಕಾಂಗ್ರೆಸ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತಿತರ ಪ್ರಮುಖರು ಹಾಜರಿದ್ದರು.







