




ಮಡಿಕೇರಿ ಏ.9 NEWS DESK : ಲೋಕಸಭಾ ಚುನಾವಣೆಯಲ್ಲಿ ಕೊಡಗು- ಮೈಸೂರು ಕ್ಷೇತ್ರವನ್ನು ಗೆಲ್ಲಲೇಬೇಕಾಗಿರುವ ಅನಿವಾರ್ಯತೆಯಲ್ಲಿರುವ ಕಾಂಗ್ರೆಸ್ ದಕ್ಷಿಣ ಕೊಡಗಿನಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದೆ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮತಯಾಚಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೊಳ್ಳು ಭರವಸೆಗಳ ಮೂಲಕ ಆಡಳಿತ ನಡೆಸುತ್ತಿದೆ. ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕತೆ ಬಿಜೆಪಿಗೆ ಇಲ್ಲವೆಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲರಿಗೂ ಸಹಕಾರಿ ಆಗಲಿ ಎಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದೆ. ಈ ಯೋಜನೆಗಳಿಂದ ಜನ ಸಂತೃಪ್ತಿಯಿಂದ ಇದ್ದಾರೆ. ಅಭಿವೃದ್ಧಿ ಕಾರ್ಯಗಳು ಕೂಡ ಜನರ ನಿರೀಕ್ಷೆಯಂತೆ ನಡೆಯುತ್ತಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ವಿವರಿಸಿದರು. ಚೆನ್ನಯ್ಯನಕೋಟೆ ಪಂಚಾಯಿತಿ, ಮಾಲ್ದಾರೆ ಪಂಚಾಯಿತಿ, ಕಾರಗುಂದ ಪಂಚಾಯಿತಿ, ತಟ್ಟೆಕೆರೆ, ಕುಂಬಾರ ಕಟ್ಟೆ, ಪಾಲದಳ, ಬಾಳೆಲೆ ವ್ಯಾಪ್ತಿಯ ಗಂಧದ ಗುಡಿ ಪೈಸಾರಿ, ಕೊಪ್ಪಲು ಹಾಗೂ ಪೊನ್ನಪ್ಪಸಂತೆ ಗ್ರಾ.ಪಂ ಸೇರಿದಂತೆ ವಿವಿಧೆಡೆ ಪೊನ್ನಣ್ಣ ಅವರು ಮತಯಾಚನೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ ಮತ್ತಿತರ ಪ್ರಮುಖರು ಹಾಜರಿದ್ದರು.










