
ನಾಪೋಕ್ಲು ಏ.20 NEWS DESK : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಪೋಕ್ಲುವಿನಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭ ಮಾತನಾಡಿದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ .ಯುವಕರಿಗೆ ಉದ್ಯೋಗ ಪೂರೈಸಿಲ್ಲ. ಮೀಸಲಾತಿಯನ್ನು ಕಿತ್ತು ಹಾಕಿದ್ದಾರೆ. ಸಂವಿಧಾನ ಬದಲಾಯಿಸುವುದೇ ಬಿಜೆಪಿಯ ಮುಖ್ಯ ಕಾರ್ಯಕ್ರಮವಾಗಿದೆ. ಬಿಜೆಪಿ ಸರ್ಕಾರದಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನ ಮಾನಸದಲ್ಲಿ ಉಳಿದಿವೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಅತ್ಯಧಿಕ ಮತಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಡಿಸಿಸಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಮಾಜಿ ಶಾಸಕ ಅರುಣ್ ಮಾಚಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಕೆಡಿಪಿ ಸದಸ್ಯ ಎಂ ಯಚ್ ಅಬ್ದುಲ್ ರೆಹಮಾನ್, ಬಾಚಮಂಡ ಲವ ಚಿಣ್ನಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಐ.ಜಿ ಚಿಣ್ಣಪ್ಪ, ಸೂರಜ್ ಹೊಸೂರು, ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಪಿ.ಎ.ಸಿರಾಜುದ್ದೀನ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.







