
ಸುಂಟಿಕೊಪ್ಪ ಜೂ.2 NEWS DESK : ಹಿಂಬದಿಯಿಂದ ಸ್ಕೂಟಿಗೆ ಇನ್ನೋವಾ ವಾಹನ ಡಿಕ್ಕಿಯಾಗಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ.
ಇನ್ನೋವಾ ವಾಹನ ಡಿಕ್ಕಿಯಾಗಿ ಸ್ಕೂಟಿ ಸವಾರ ಇಬ್ರಾಹಿಂ (60) ಅವರು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ತೀವ್ರ ರೀತಿಯಲ್ಲಿ ಗಾಯವಾಗಿದೆ. ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕೇರಳದ ಕಣ್ಣೂರಿನಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಇನ್ನೋವಾ ಇಬ್ರಾಹಿಂ ಅವರ ಸ್ಕೂಟಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೋಲಿಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.








