
ಮಡಿಕೇರಿ NEWS DESK ಸೆ.13 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಸಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. ಬಿಜೆಪಿಯ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮಾತನಾಡಿ ಅಮೆರಿಕದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಮೀಸಲಾತಿ ರದ್ದು ಪಡಿಸುವ ಕುರಿತು ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದು ಮಾಡಲು ಬಯಸುತ್ತದೆ ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಎಚ್ಚರಿಕೆ ನೀಡಿದಂತ್ತಾಗಿದೆ ಎಂದು ಆರೋಪಿಸಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ್, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಲೋಕಸಭಾ ಸ್ಪೀಕರ್ ಗೆ ನೀಡಿದರು.










