
ಮಡಿಕೇರಿ NEWS DESK ಡಿ.20 : ವಿಶ್ವಕ್ಕೇ ಮಾದರಿಯಾಗಿರುವ ಮಹಾನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ಕೇಂದ್ರ ಸರಕಾರ ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡನೀಯ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ತಪ್ಪಿದಲ್ಲಿ ಸರಕಾರವೇ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಮಾನ ಮಾಡುವ ರೀತಿಯಲ್ಲಿ ನೀಡಿರುವ ಹೇಳಿಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮನೋಸ್ಥಿತಿಯನ್ನು ಬಹಿರಂಗ ಪಡಿಸಿದೆ. ಅಂಬೇಡ್ಕರ್ ಅವರ ಹೆಸರಿಗೆ ಮಸಿ ಬಳಿಯುವ ಕಾರ್ಯ ಬಿಜೆಪಿಗೆ ಹೊಸದೇನಲ್ಲ. ನಿರಂತರವಾಗಿ ನಡೆದುಕೊಂಡು ಬಂದಿರುವ ಈ ಪ್ರಕ್ರಿಯೆ ಅಮಿತ್ ಶಾ ಅವರ ಮೂಲಕ ಬಹಿರಂಗಗೊAಡಿದೆ ಎಂದು ಆರೋಪಿಸಿದ್ದಾರೆ. ವಿಶ್ವ ಶ್ರೇಷ್ಠ ಸಂವಿಧಾನವನ್ನು ತಿದ್ದುಪಡಿ ಮಾಡಲೆಂದೇ ಅಧಿಕಾರಕ್ಕೆ ಬಂದ ಬಿಜೆಪಿ ಈ ರೀತಿಯ ವರ್ತನೆಗಳನ್ನು ತೋರುವುದು ಸಹಜವಾಗಿದೆ. ಭೂಮಿಗೆ ಸೂರ್ಯ, ಚಂದ್ರ ಎಷ್ಟು ಅಗತ್ಯವಿದೆಯೋ ಅಷ್ಟೇ ಗೌರವದ ಸ್ಥಾನ ಸಂವಿಧಾನಕ್ಕೆ ಕೂಡ ಇದೆ. ನೊಂದವರ ಧ್ವನಿಯಾಗಿ ಸಾಮಾಜಿಕ ನ್ಯಾಯ ಒದಗಿಸಿದ ಡಾ.ಅಂಬೇಡ್ಕರ್ ಅವರನ್ನು ಕಡೆಗಣಿಸಿರುವ ಅಮಿತ್ ಶಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಬಿಜೆಪಿ ಬಣ್ಣ ಬಯಲಾಗಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಡಾ.ಅಂಬೇಡ್ಕರ್ ಅವರ ಅನುಯಾಯಿಗಳು ಸ್ವಾಭಿಮಾನದಿಂದ ಪಕ್ಷ ತೊರೆದು ಹೊರ ಬಂದು ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಬೇಕು ಎಂದು ಜೆ.ಎಲ್.ಜನಾರ್ಧನ್ ಒತ್ತಾಯಿಸಿದ್ದಾರೆ.








