
ಮಡಿಕೇರಿ ಡಿ.20 NEWS DESK : ಸಂವಿಧಾನದ ಮೂಲಕ ದೇಶದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರುವ ರೀತಿಯ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂದು ಅಮಿತ್ ಶಾ ಅವರು ಅಧಿಕಾರದ ಉನ್ನತ ಸ್ಥಾನಕ್ಕೇರಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣವಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ತುಂಬಿದ ಹೆಗ್ಗಳಿಕೆ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಈ ಕಾರಣಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಸ್ಮರಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ತಪ್ಪಿಗಾಗಿ ಅಮಿತ್ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ರಾಷ್ಟ್ರಪತಿಗಳು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.









