
ಮಡಿಕೇರಿ ಫೆ.12 NEWS DESK : ನೂತನವಾಗಿ ಕಾರ್ಯಾರಂಭಗೊಂಡಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಚಿಕ್ಕಪೇಟೆ ಬಳಿ ಇರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಸಾರ್ವಜನಿಕ ಹಿತಾಸಕ್ತಿಯಲ್ಲಿ ಪುರಸಭೆ ಸದಸ್ಯರು ಶಾಸಕರಲ್ಲಿ ಶುದ್ಧ ನೀರಿನ ಘಟಕ ಮಂಜೂರು ಮಾಡುವಂತೆ ಮನವಿ ಮಾಡಿದ ಹಿನ್ನೆಲೆ ಶಾಸಕರು ವಿಶೇಷ ಅನುದಾನ ಒದಗಿಸಿದ್ದು, ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಶಾಸಕರು, ಇಂದಿನ ದಿನದಲ್ಲಿ ನೀರಿನ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು. ಅದರಲ್ಲೂ ಶುದ್ಧ ನೀರು ಸಿಗುವುದು ದುಸ್ತರ ಎಂಬಂತಾಗಿರುವ ದಿನಗಳಲ್ಲಿ ಶುದ್ಧ ನೀರಿನ ಘಟಕದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಚಿಕ್ಕಪೇಟೆಯ ಶಾಲೆಯ ಮುಖ್ಯ ಶಿಕ್ಷಕರು ಶಾಸಕರಿಗೆ ಮನವಿ ಸಲ್ಲಿಸಿದರು. ಶಾಸಕರು ಶಾಲಾ ಮಕ್ಕಳೊಂದಿಗೆ ಕೆಲ ಕ್ಷಣ ಕಳೆದರು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖರು ಹಾಜರಿದ್ದರು.









