
ಕುಶಾಲನಗರ ಫೆ.22 NEWS DESK : ಕೇಂದ್ರ ಸರ್ಕಾರ ವಕ್ಫ್ ಮಸೂದೆ ತಿದ್ದುಪಡಿ ಮಾಡಿರುವ ನಿರ್ಣಯವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಮುಸ್ಲಿಂ ಒಕ್ಕೂಟದ ಪ್ರಮುಖರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಮುಸ್ಲಿಂ ಒಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷ ಈ.ಕೆ.ಕರೀಂ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕಾಯ್ದೆಯನ್ನು ತಕ್ಷಣವೆ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಕೊಡಗು ವಿಶ್ವವಿದ್ಯಾನಿಲಯ ರದ್ದುಗೊಳಿಸುವ ನಿರ್ಣಯ ಕೈಗೊಳ್ಳಬಾರದು ಅಥವಾ ಇತರ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ನಿರ್ಧಾರ ಸರ್ಕಾರ ಮಾಡಿದ್ದಲ್ಲಿ ಜಿಲ್ಲೆಯ ಬಡ ಮತ್ತು ಅಲ್ಪಸಂಖ್ಯಾತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಅನ್ಯಾಯ ಮಾಡಿದಂತಾಗುತ್ತದೆ. ಕೊಡಗು ವಿವಿಯನ್ನು ಅಳುವಾರದಲ್ಲಿ ಉಳಿಸಿಕೊಂಡು ಅದರ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಪ್ರಮುಖರಾದ ಅಬ್ದುಲ್ ರಜಾಕ್, ಆದಮ್, ಇಬ್ರಾಹಿಂ, ಉಸ್ಮಾನ್, ರಿಜ್ವಾನ್, ಶಮಿ, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಹನೀಫ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










