
ಮಡಿಕೇರಿ NEWS DESK ಏ.23 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡನೀಯವಾಗಿದ್ದು, ದೇಶದ್ರೋಹಿಗಳನ್ನು ಮಟ್ಟ ಹಾಕುವ ಕಾಲ ಸನ್ನಿಹಿತವಾಗಿದೆ ಎಂದು ಮಡಿಕೇರಿ ನಗರ ಮಂಡಲ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರು, ಪ್ರವಾಸಿಗರನ್ನು ಹತ್ಯೆ ಮಾಡಿ ಅಮಾನವೀಯವಾಗಿ ನಡೆದುಕೊಂಡ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರನ್ನು ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಾಶ ಮಾಡಲಿದೆ ಎಂದು ತಿಳಿಸಿದ್ದಾರೆ. ಮೋದಿಯವರು ಪ್ರಧಾನಿಯಾದ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ನಿಯಂತ್ರಿಸಿದ್ದಾರೆ. ಮೊದಲಿದ್ದ ಆತಂಕದ ವಾತಾವರಣ ದೂರವಾಗಿರುವುದರಿಂದ ಇಲ್ಲಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ. 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಜನರು ಶಾಂತಿಯುತ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಯಾವುದೇ ಭಯವಿಲ್ಲದೆ ಮುಕ್ತವಾಗಿ ಓಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯೂ ಶಾಂತಿಯುತವಾಗಿ ನಡೆದಿದೆ. ಇಲ್ಲಿನ ಎಲ್ಲಾ ವ್ಯವಸ್ಥೆಗಳು ಸುಧಾರಣೆಯ ಹಂತದಲ್ಲಿರುವುದನ್ನು ಸಹಿಸದ ಭಯೋತ್ಪಾದಕರು ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ, ಮೃತಪಟ್ಟ ಪ್ರವಾಸಿಗರ ಕುಟುಂಬಗಳಿಗೆ ಸಾಂತ್ವನವನ್ನು ತಿಳಿಸುತ್ತದೆ ಮತ್ತು ಭಯೋತ್ಪಾದಕರ ವಿರುದ್ಧದ ಕೇಂದ್ರ ಸರ್ಕಾರದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ.








