
ಮಡಿಕೇರಿ NEWS DESK ಏ.25 : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಹಾಗೂ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೌಸರ್ ಎಂ.ಬಿ ಅವರು ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರುಗಳು ಉಗ್ರರ ದಾಳಿಯಲ್ಲಿ ಅಸುನೀಗಿರುವ 26 ಅಮಾಯಕ ಜೀವಗಳ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಭಯೋತ್ಪಾದಕರ ನಾಶವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ ಮತ್ತು ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕೇಂದ್ರ ಸರ್ಕಾರ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಮಾನವೀಯತೆಯ ನೆಲೆಗಟ್ಟಿನಲ್ಲಿ ಶಾಂತಿ, ಸಹಬಾಳ್ವೆಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿರುವ ಭಾರತೀಯರ ಒಗ್ಗಟ್ಟಿನ ಬೆಳವಣಿಗೆಯನ್ನು ಸಹಿಸದ ದೇಶದ್ರೋಹಿಗಳು ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇದನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಹಾಗೂ ಗುಪ್ತಚರ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಜಮ್ಮು ಕಾಶ್ಮೀರದಲ್ಲಿ ಜನರು ಭಯಮುಕ್ತರಾಗಿ ಜೀವನ ನಡೆಸಲು ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಭಾರತೀಯರೆಲ್ಲರು ಒಗ್ಗಟ್ಟನ್ನು ಪ್ರದರ್ಶಿಸಿ ದೇಶದ ಸುರಕ್ಷತೆಗಾಗಿ ಪಣ ತೊಡಬೇಕು ಎಂದು ಕೆ.ಜಿ.ಪೀಟರ್ ಹಾಗೂ ಕೌಸರ್ ಎಂ.ಬಿ ಕರೆ ನೀಡಿದ್ದಾರೆ.








