
ಸೋಮವಾರಪೇಟೆ ಏ.28 NEWS DESK : ಕೊಡಗು ವಿಶ್ವವಿದ್ಯಾಲಯಯವನ್ನು ರದ್ದುಪಡಿಸುವುದು ಅಥವಾ ವಿಲೀನಗೊಳಿಸುವುದಕ್ಕೆ ಮುಂದಾದರೆ ಅದರ ದುಷ್ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ ಎಂದು ರಾಜ್ಯ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಎಚ್ಚರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಜೇಸಿ ವೇದಿಕೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯವನ್ನು ಉಳಿಸಿಬೇಕೆಂಬ ಹಕ್ಕೊತ್ತಾಯವನ್ನು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೊಡಗು ವಿಶ್ವವಿದ್ಯಾಲಯವನ್ನು ವಿಲೀನ ಮಾಡುವುದಿಲ್ಲ ಎಂದು ಇದೂವರೆಗೆ ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸೇರಲು ಭಯಪಡುತ್ತಿದ್ದಾರೆ ಎಂದರು. ಜನಪ್ರತಿನಿಧಿಗಳು, ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದೆ. ಜಿಲ್ಲೆಯ ಶಾಸಕರುಗಳು ಕೂಡ ಇದರ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸುತ್ತಿಲ್ಲ ಎಂದರು. ಸಭೆಯಲ್ಲಿ ಪಾಲ್ಗೊಂಡಿದ್ದ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ ಮಾತನಾಡಿ, ಜಿಲ್ಲೆಯ ಇಬ್ಬರು ಶಾಸಕರುಗಳು ವಿಶ್ವವಿದ್ಯಾಲಯವನ್ನು ಉಳಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು. ರೈತರು, ಬಡವರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ-ಪಂಗಡದವರು ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾರೆ. ಕೊಡಗಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ನಗರ ಪ್ರದೇಶಗಳಿಗೆ ಹೋಗಿ ಸ್ನಾತಕೋತ್ತರ ಪದವಿ ಪಡೆಯಲು ಸಾಧ್ಯವಾಗುತ್ತಿಲ್ಲ. ನಮ್ಮ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಮುಂದುವರಿದರೆ, ನಮ್ಮ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಟ್ಟಿಕೊಳ್ಳುತ್ತಾರೆ ಎಂದು ಆಶಿಸಿದರು. ಪ್ರತಿಭಟನಾ ಸಭೆಯಲ್ಲಿ ಕಾರ್ಯದರ್ಶಿ ಮಂಜುನಾಥ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ನಗರಾಧ್ಯಕ್ಷ ಮಂಜುನಾಥ್, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಅಧ್ಯಕ್ಷರು, ತಾಲೂಕು ಮತ್ತು ಹೋಬಳಿ ಘಟಕದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು. ಪ್ರತಿಭಟನಾಕಾರರು ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ತಹಸೀಲ್ದಾರ್ ಕೃಷ್ಣಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.









