
ಮಡಿಕೇರಿ NEWS DESK ಮೇ 1 : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಪ್ರಮುಖನನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗದಿದ್ದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸರು ದಕ್ಷತೆಗೆ ಹೆಸರುವಾಸಿಯಾಗಿದ್ದು, ದೇಶದಲ್ಲಿಯೇ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ. ಯಾವುದೇ ಕ್ಲಿಷ್ಟಕರ ಪ್ರಕರಣಗಳನ್ನು ಬೇಧಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ ವಿನಯ್ ಆತ್ಮಹತ್ಯೆ ಮಾಡಿಕೊಂಡು ತಿಂಗಳಾದರೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ವ್ಯಕ್ತಿಯ ಬಂಧನವಾಗಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವ ವ್ಯಕ್ತಿ ಪೊಲೀಸರ ಕಣ್ಣಿಗೆ ಯಾಕೆ ಬೀಳುತ್ತಿಲ್ಲವೆಂದು ಪ್ರಶ್ನಿಸಿದ್ದಾರೆ. ವಿನಯ್ ಪ್ರಕರಣದಲ್ಲಿ ಪೊಲೀಸರ ಮೇಲೆ ಒತ್ತಡ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ರಾಜಕೀಯ ಪ್ರಭಾವವಿಲ್ಲದೆ ಪೊಲೀಸರು ಸ್ವತಂತ್ರವಾಗಿ ಕಾರ್ಯನಿರ್ವಹಿಸಿದ್ದರೆ ಇಷ್ಟೊತ್ತಿಗಾಗಲೇ ಬಂಧನವಾಗುತ್ತಿತ್ತು. ಪೊಲೀಸರು ಅಸಹಾಯಕ ಸ್ಥಿತಿಯಲ್ಲಿರುವುದು ಸ್ಪಷ್ಟವಾಗುತ್ತಿದ್ದು, ಅನುಮತಿ ನೀಡಿದರೆ ಸಾರ್ವಜನಿಕರೇ ವ್ಯಕ್ತಿಯನ್ನು ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸುವುದಾಗಿ ರಾಕೇಶ್ ದೇವಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಮಸ್ಯೆಯ ಕುರಿತು ಸಂದೇಶವೊಂದನ್ನು ರವಾನಿಸಿದರೆ ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಿ ವಶಕ್ಕೆ ಪಡೆಯುವ ಪೊಲೀಸರು ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ವ್ಯಕ್ತಿಯ ಪರ ಮೃದುಧೋರಣೆ ತಾಳಿರುವುದನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆಯೇ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ಸಿಗರಿಗೆ ಪ್ರತ್ಯೇಕ ಕಾನೂನು ಜಾರಿಯಲ್ಲಿದೆಯೇ ಎಂದು ಪ್ರಶ್ನಿಸಿದ್ದಾರೆ. ಇತ್ತೀಚೆಗೆ ಮೂರ್ನಾಡಿನಲ್ಲಿ ವ್ಯಕ್ತಿಯೊಬ್ಬ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ನಡುರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಆದರೆ ವಿಡಿಯೋ ಸಾಕ್ಷ್ಯಗಳಿದ್ದರೂ ಈತನ ವಿರುದ್ಧ ಕ್ರಮವಾಗಿಲ್ಲ. ಈ ಪ್ರಕರಣದಲ್ಲೂ ರಾಜಕೀಯ ಪ್ರಭಾವ ಕೆಲಸ ಮಾಡಿದೆ, ಪೊಲೀಸರಿಗೆ ರಕ್ಷಣೆ ಇಲ್ಲದಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲು ಅಸಾಧ್ಯವಾಗಿದೆ ಎಂದು ಆರೋಪಿಸಿದ್ದಾರೆ. ವಿನಯ್ ಆತ್ಮಹತ್ಯೆಯಿಂದ ಅವರ ಕುಟುಂಬ ಅನಾಥವಾಗಿದೆ, ಮೂರು ತಿಂಗಳ ಹಸುಗೂಸಿನೊಂದಿಗೆ ಪತ್ನಿ ಕಣ್ಣೀರು ಹಾಕುತ್ತಿದ್ದಾರೆ. ವಿನಯ್ ಸಾವಿಗೆ ನ್ಯಾಯ ಸಿಗಬೇಕಾದರೆ ಪ್ರಮುಖ ವ್ಯಕ್ತಿಯ ಬಂಧನವಾಗಬೇಕು. ಈತನ ಬಂಧನಕ್ಕೆ ಒತ್ತಾಯಿಸಿ ವಿರೋಧ ಪಕ್ಷಗಳ ನಾಯಕರುಗಳು ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಪೊಲೀಸರು ತಕ್ಷಣ ಬಂಧಿಸದಿದ್ದಲ್ಲಿ ವಿರಾಜಪೇಟೆ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಲಿದ್ದಾರೆೆ ಎಂದು ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ.








