
ಸೋಮವಾರಪೇಟೆ NEWS DESK ಮೇ 14 : ಸುಮಾರು 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್ ನಿವಾಸಿ ಸಂಪತ್ ಶವ ಕೊಡಗು- ಹಾಸನ ಗಡಿಭಾಗದ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ನಿರ್ಜನ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್ ನಿವಾಸಿ ದಾಮೋಧರ್ ನಾಯರ್ ಅವರ ಪುತ್ರ ಸಂಪತ್ ಅಲಿಯಾಸ್ ಶಂಭು (45) ಮೃತರಾದವರು. ಬುಧವಾರ ಬೆಳಿಗ್ಗೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ದಾಖಲೆಯನ್ನು ಸಂಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.








