
ಮಡಿಕೇರಿ ಜೂ.7 NEWS DESK : ಪಾಲಿಬೆಟ್ಟದಲ್ಲಿ ಸುಮಾರು 2.97 ಕೋಟಿ ರೂ.ಗಳಲ್ಲಿ ನಿರ್ಮಾಣವಾದ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲೂಕಿನಲ್ಲಿ ನಿರ್ಮಾಣಗೊಂಡ ವಿದ್ಯಾರ್ಥಿ ನಿಲಯವು, ಸುತ್ತಮುತ್ತಲಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂಥ ವಾತಾವರಣ ನಿರ್ಮಿಸಲಿದೆ ಎಂದು ಹಾರೈಸಿದರು. ಇಲ್ಲಿ ವಿದ್ಯಾರ್ಥಿನಿಯರಿಗೆ ಬೇಕಾದಂತಹ ಎಲ್ಲಾ ಮೂಲಭೂತ ಸೌಕರ್ಯವೂ ಸದಾ ಒದಗುವಂತೆ ನೋಡಿಕೊಳ್ಳುವುದು ಪ್ರಥಮ ಆದ್ಯತೆ ಆಗಿರಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರಿಗೆ ಸುರಕ್ಷೆ ಹಾಗೂ ಉತ್ತಮ ವಾತಾವರಣ ಇರುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಜಾನ್ಸನ್, ಕೆಡಿಪಿ ಸದಸ್ಯರಾದ ಗಣೇಶ್, ಪಾಲಿಬೆಟ್ಟ ವಲಯ ಅಧ್ಯಕ್ಷ ಕಾಳಪ್ಪ, ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖರು ಹಾಜರಿದ್ದರು.









