
ಮಡಿಕೇರಿ ಜೂ.9 NEWS DESK : ವಿರಾಜಪೇಟೆ ತಾಲ್ಲೂಕು ಕುಂಜಲಗೇರಿ ಗ್ರಾಮದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಲಯ ಕಾಂಗ್ರೆಸ್ ವತಿಯಿಂದ ಕುಂಜಲಗೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸುಮಾರು 70ಕ್ಕೂ ಅಧಿಕ ಮಂದಿ ಕಾರ್ಯಕರ್ತರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ ರಾಜ್ಯಾದ್ಯಂತ ನಡೆದಿದೆ. ಈ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವಲ್ಲಿ ಪಕ್ಷದ ಕಾರ್ಯಕರ್ತರ ಶ್ರಮ ಅಗತ್ಯ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಯುವ ಕಾಂಗ್ರೆಸ್ ಕೊಡಗು ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ, ಯುವ ಕಾಂಗ್ರೆಸ್ ವಿರಾಜಪೇಟೆ ಕ್ಷೇತ್ರ ಅಧ್ಯಕ್ಷ ಪಟ್ಟಡ ರಕ್ಷಿತ್, ವಲಯ ಕಾಂಗ್ರೆಸ್ ಪ್ರಮುಖರಾದ ಬಟ್ಟಕಾಳಂಡ ರಾಜ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಹಾಜರಿದ್ದರು. ಕಾರ್ಯಕ್ರಮಕ್ಕೂ ಮೊದಲು ಶಾಸಕರು ಸ್ಥಳೀಯ ಭಗವತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಲ್ಕು ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಮುಖಂಡರು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಶಾಸಕರು ಎರಡು ರಸ್ತೆಗೆ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ಉಳಿದ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಿಕೊಡುವುದಾಗಿ ತಿಳಿಸಿದರು.










