
ಮಡಿಕೇರಿ ಜೂ.16 NEWS DESK : ಕಾವೇರಿ ನಾಡು ಕೊಡಗು ಜಿಲ್ಲೆಯಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಚಳಿಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಭರ್ತಿಯಾಗುತ್ತಿರುವ ಹಾರಂಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಭಾರೀ ಗಾಳಿ ಮಳೆಯಿಂದ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಕೃಷ್ಣ ನಗರದ ನಿವಾಸಿ ಹೆಚ್.ಕೆ.ರವಿ ಎಂಬುವವರ ಮನೆಯ ಗೋಡೆ ಕುಸಿದು ಹಾನಿಯಾಗಿದೆ. ಬಾಡಗ ಬಾಣಂಗಾಲ ಗ್ರಾಮದ ಕೆ.ಪಿ.ಅಮೀನ ಕುಂಞ ಮಹಮ್ಮದ್ ಎಂಬುವವರ ಮನೆಯ ಮುಂಭಾಗದ ಗೋಡೆ ಮತ್ತು ಮೇಲ್ಚಾವಣಿ ಹಾನಿಗೊಳಗಾಗಿದೆ. ಮನೆ ಗೋಡೆ ಕುಸಿದು ಸಂಕಷ್ಟದಲ್ಲಿರುವ ಕುಟುಂಬಗಳನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಲಪ್ಪ ಅವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮಳೆಹಾನಿ ಪರಿಹಾರದ ಅನುದಾನದಿಂದ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕುತ್ತಿದೆ. ಅಲ್ಲಲ್ಲಿ ಮರಗಳು ಬಿದ್ದು ಹಾನಿಯಾಗುತ್ತಿದ್ದರೆ, ಮತ್ತೊಂದೆಡೆ ಮನೆಯ ಗೋಡೆಗಳು ಕುಸಿದು ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ತಾಲ್ಲೂಕು ಆಡಳಿತಾಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಮುಖರಾದ ಮಾಪಂಗಡ ಯಮುನಾ ಚಂಗಪ್ಪ, ಎಂ.ಎಂ.ರವೀಂದ್ರ, ಮಧು ದೇವಯ್ಯ, ಕಂದಾಯ ಪರಿವೀಕ್ಷಕ ಸುಧೀಂದ್ರ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಗೋಪಿ ಮತ್ತಿತರರು ಹಾಜರಿದ್ದರು. ಕಾವೇರಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ಜಿಲ್ಲೆಯ ಮೂಲಕ ಹರಿದು ಹೋಗುವ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿದೆ. ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ ಮಡಿಕೇರಿ ತಾಲ್ಲೂಕಿನಲ್ಲಿ ಮೈಕೊರೆಯುವ ಚಳಿಯೊಂದಿಗೆ ಹೆಚ್ಚಿನ ಮಳೆಯಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಇಲ್ಲಿಯವರೆಗೆ 913.84 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 488.06 ಮಿ.ಮೀ ಮಳೆಯಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.28 ಮಿ.ಮೀ. ಮಳೆಯಾಗಿತ್ತು. ಸಂಪಾಜೆಯಲ್ಲಿ 107 ಮಿ.ಮೀ, ಶಾಂತಳ್ಳಿ 109 ಮಿ.ಮೀ ಮತ್ತು ಭಾಗಮಂಡಲದಲ್ಲಿ 122 ಮಿ.ಮೀ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 80.55 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 47.95 ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ 48.49 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 53.60 ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ 13.40 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.78 ಅಡಿಗಳು. ಕಳೆದ ವರ್ಷ ಇದೇ ದಿನ 2827.81 ಅಡಿಗಳು. ಜಲಾಶಯದಿಂದ ಇಂದು 10 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿಯಲ್ಲಿ ಬಿದ್ದ ಮಳೆ 11.20 ಮಿ.ಮೀ











