
ಮಡಿಕೇರಿ ಜು.11 NEWS DESK : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕೇಂದ್ರ ಆವರಣದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತು ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಹರಡುವ ಪ್ರಾಣಿಜನ್ಯ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತೀ ವರ್ಷ ಜು.6 ರಂದು ಪ್ರಾಣಿಜನ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಪಶುವೈದ್ಯಕೀಯ ವೃತ್ತಿಯು ಪ್ರಾಣಿಗಳ ಆರೋಗ್ಯ ಮತ್ತು ಯೋಗಕ್ಷೇಮ ಹಾಗೂ ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಮೀಸಲಾಗಿರುವ ಒಂದು ಉದಾತ್ತ ಮತ್ತು ಅತ್ಯಗತ್ಯ ಕ್ಷೇತ್ರವಾಗಿದೆ ಎಂದರು. ಪಶು ವೈದ್ಯರು ಅನಾರೋಗ್ಯ ಪೀಡಿತ ಪ್ರಾಣಿಗಳಿಗೆ ಚಿಕಿತ್ಸೆ ನೀಡುವುದಷ್ಟೇ ಅಲ್ಲದೇ ವನ್ಯ ಜೀವಿಗಳಿಂದ ಮನುಷ್ಯನಿಗೆ ಹರಡಬಹುದಾದ ಜನ್ಯರೋಗಗಳನ್ನು ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮತೋಲನ ಮತ್ತು ಸಾಮರಸ್ಯದ ಭವಿಷ್ಯಕ್ಕಾಗಿ ಪ್ರಾಣಿಗಳೊಂದಿಗೆ ಸಹಾನುಭೂತಿಯ ಸಂಬಂಧವನ್ನು ಮನುಷ್ಯ ಕಾಪಾಡಿಕೊಳ್ಳಬೇಕು. ಮನುಷ್ಯ ತನ್ನ ಸುತ್ತಣ ಪರಿಸರದಲ್ಲಿರುವ ವನ್ಯ ಜೀವಿಗಳ ಆರೈಕೆ ಮತ್ತು ರಕ್ಷಣೆ, ಅವುಗಳ ಸಂರಕ್ಷಣೆಯ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ. ಎಂ.ಸಿ.ಶಿವಕುಮಾರ್ ಅವರು, ಏಕ ಆರೋಗ್ಯ ಎನ್ನುವುದು ಮಾನವನ ಆರೋಗ್ಯ, ಪ್ರಾಣಿಗಳ ಆರೋಗ್ಯ ಮತ್ತು ಪರಿಸರ ಆರೋಗ್ಯದ ಪರಸ್ಪರ ಸಂಬಂಧವನ್ನು ಗುರುತಿಸುವ ಸಹಯೋಗಿ ಮತ್ತು ಸಂಯೋಜಿತ ಪರಿಕಲ್ಪನೆಯಾಗಿದೆ. ಜನರ ಯೋಗ ಕ್ಷೇಮವು ಪ್ರಾಣಿಗಳ ಆರೋಗ್ಯ ಮತ್ತು ಅವುಗಳು ಹಂಚಿಕೊಳ್ಳುವ ಪರಿಸರ ವ್ಯವಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ ಎಂದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಡಾ. ಸುರೇಶ.ಎಂ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹಾಸನದ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ನಾಗಪ್ಪ, ಸಹ ಪ್ರಾಧ್ಯಾಪಕರುಗಳಾದ ಡಾ. ಪ್ರಲ್ಲಾದ್, ಡಾ.ಗಿರೀಶ್ ಬಿ.ಸಿ ಅವರು ವಿಷಯವನ್ನು ಮಂಡಿಸಿದರು. ಕಾರ್ಯಾಗಾರದಲ್ಲಿ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿನ ವಿವಿಧ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಕೊಡಗಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಶ್ರಮಿತಾ ಐಮುಡಿಯಂಡ ಕಾರ್ಯಕ್ರಮವನ್ನು ನಿರ್ವಹಿಸಿದರು. ಉಪನ್ಯಾಸಕ ಡಾ. ಜಮೀರ್ ಅಹಮದ್ ಸ್ವಾಗತಿಸಿದರು. ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ ಸಿಬ್ಬಂದಿಯಾದ ಎನ್.ಟಿ. ಪ್ರಶಾಂತ್ ವಂದಿಸಿದರು.









