
ನಾಪೋಕ್ಲು ಆ.18 NEWS DESK : ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢ ಶಾಲೆಯ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಲ್ಲಮಾವಟಿ ಮತ್ತು ನೇತಾಜಿ ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ಸಮೀಪದ ನೇತಾಜಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ “ದುಶ್ಚಟಗಳಿಂದ ದೂರವಿರಿ” ವಿಷಯ ಕುರಿತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾರ್ಜನೆ ಮಾಡಬೇಕು. ಬಾಹ್ಯ ಪರಿಸರದ ಒತ್ತಡಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಬಾರದು ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಮಾದರಿಯಾಗಿ ತೆಗೆದುಕೊಂಡು ಶ್ರದ್ಧೆಯಿಂದ ಕಲಿತರೆ ಜವಾಬ್ದಾರಿಯುತ ಸ್ಥಾನ ಹಾಗೂ ಹುದ್ದೆಯನ್ನು ಪಡೆಯಬಹುದು. ಶಿಸ್ತು ಸಂಯಮ ಹಾಗೂ ಏಕಾಗ್ರತೆಯಿಂದ ನಡೆಸುವ ಜೀವನ ಸಮೃದ್ಧ ಆರೋಗ್ಯಕ್ಕೆ ಪೂರಕವಾಗಿದೆ ಎಂದರು. ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ. ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು. ಇವುಗಳಿಂದ ಹೊರಬರಲು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುನಿಲ್ ಕುಮಾರ್, ಕೃಷಿ ಅಧಿಕಾರಿ ವೆಂಕಟೇಶ್, ಮುಖ್ಯಶಿಕ್ಷಕ ಸಿ.ಎಸ್.ಸುರೇಶ್, ಸೇವಾಪ್ರತಿನಿಧಿಗಳಾದ ಹೇಮಾ, ಶಾರದಾ, ಶಿಕ್ಷಕವೃಂದ ಉಪಸ್ಥಿತರಿದ್ದರು. ಶಿಕ್ಷಕ ಮೆಹಬೂಬ್ ಸಾಬ್ ಸ್ವಾಗತಿಸಿದರು. ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುನಿಲ್ ಕುಮಾರ್ ವಂದಿಸಿದರು.
ವರದಿ : ದುಗ್ಗಳ ಸದಾನಂದ.






































