
ಬಾಳೆಲೆ NEWS DESK ಆ.27 : ಅರಣ್ಯ ಮಹಾವಿದ್ಯಾಲಯ, ಪೊನ್ನಂಪೇಟೆಯ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ 21 ದಿನಗಳ ಕಾಲ ಬಾಳೆಲೆಯಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮವು ವಿದ್ಯಾರ್ಥಿಗಳನ್ನು ನೇರವಾಗಿ ಗ್ರಾಮೀಣ ಜೀವನಕ್ಕೆ ಪರಿಚಯಿಸಿ, ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅವಕಾಶ ಒದಗಿಸುವುದರ ಜೊತೆಗೆ ಗ್ರಾಮೀಣ ಅಭಿವೃದ್ಧಿಗೆ ಸಹಕಾರಿ ಆಗುವ ಉದ್ದೇಶ ಹೊಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದರು. ವನಮಹೋತ್ಸವದ ಮಹತ್ವವನ್ನು ವಿವರಿಸಿ, ಹಸಿರು ಸಂರಕ್ಷಣೆ, ಪರಿಸರ ಸಮತೋಲನ ಮತ್ತು ಮುಂದಿನ ಪೀಳಿಗೆಯ ಹಿತಕ್ಕಾಗಿ ಸಸಿ ನೆಡುವುದು ನಮ್ಮ ಪ್ರತಿಯೊಬ್ಬರ ಕರ್ತವ್ಯವೆಂದು ಕರೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸ್ಮಿತಾ ಪೊನ್ನಣ್ಣ, ಉಪಾಧ್ಯಕ್ಷ ನವೀನ್, ಪಿಡಿಒ ಪರಮೇಶ್ವರ, ಪಶುವೈದ್ಯ ಇಲಾಖೆಯ ಹಿರಿಯ ಅಧಿಕಾರಿ ಡಾ.ಬವೀಶ್, ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯ ಗ್ರಾಮಸ್ಥರು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವಿದ್ಯಾರ್ಥಿಗಳು, ಅತಿಥಿಗಳು ಹಾಗೂ ಗ್ರಾಮಸ್ಥರು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ವಿದ್ಯಾರ್ಥಿಗಳು ಗ್ರಾಮಸ್ಥರಲ್ಲಿ ವಿನಂತಿಸಿಕೊಂಡರು.











