
ಮಡಿಕೇರಿ NEWS DESK ಸೆ.14 : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, 2025 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ತನಕ ಒಟ್ಟು 15 ದಿನ ನಡೆಯಲಿರುವ ರಾಜ್ಯ ಸರ್ಕಾರದ ಜಾತಿವಾರು ಗಣತಿಯ ಜಾತಿ-ಭಾಷೆ-ಧರ್ಮ ಕಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆಪ್ಟೆಂಬರ್ 18 ರಂದು ಮೂರ್ನಾಡಿನಲ್ಲಿ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಮತ್ತು ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯಲ್ಲಿ ಕೊಡವರು ಎಂದು ಧರ್ಮ-ಜಾತಿ-ಭಾಷೆ ಕಾಲಂನಲ್ಲಿ ಬರೆಸುವ ಮಹತ್ವದ ಕುರಿತಾಗಿ ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮವು ಮೂರ್ನಾಡಿನಲ್ಲಿ ಶಾಂತಿಯುತವಾಗಿ ನಡೆಯಲಿದ್ದು, ಆ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.








