
ಮಡಿಕೇರಿ ಸೆ.19 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಷ್ಣು ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ.ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60 ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರ ಆರ್ಥಿಕ ಸಮಾಲೋಚಕರದ ನಬಿ ಅವರು ಮಾತನಾಡಿ, ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಆರ್ಥಿಕ ಸಮಾಲೋಚಕರಾದ ಸಿ.ಜಿ.ಹರೀಶ್ ಮಾತನಾಡಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ತಿಳಿಸಿದರು. ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಆಸೀಪ್ ಮಾತನಾಡಿ, ಈ ಕಾರ್ಯಕ್ರಮವು ಅತ್ಯಂತ ಉಪಯುಕ್ತ ವಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹರೀಶ್ ಸ್ವಾಗತಿಸಿ, ನಿರೂಪಿಸಿದರು.








