
ಸೋಮವಾರಪೇಟೆ NEWS DESK ಸೆ.21 : ಸಮಾಜದಲ್ಲಿ ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಪಟ್ಟಣದ ಸ್ತ್ರೀ ಶಕ್ತಿ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದು ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಬೇಕು. ಯಾರೂ ಕೂಡ ಸೌಲಭ್ಯಗಳಿಂದ ವಂಚಿತರಾಗಬಾರದು. ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿಗಳಿದ್ದು, ಅಲ್ಲಿ ಯಾರೂ ಕೂಡ ಸರ್ಕಾರದ ಸೌಲಭ್ಯಗಳಿಂದ ದೂರ ಉಳಿಯದಂತೆ ಎಚ್ಚರಿಕೆ ವಹಿಸಬೇಕೆಂದರು. ಪೌಷ್ಠಿಕ ಆಹಾರಗಳನ್ನು ಹೆಚ್ಚು ಹೆಚ್ಚಾಗಿ ಸೇವಿಸುವ ಮೂಲಕ ತಾಯಿ ಹಾಗು ಮಗುವಿನ ಆರೋಗ್ಯ ವೃದ್ಧಿಯಾದರೆ ಅದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಡಿಗಲ್ಲು. ಗರ್ಭಿಣಿಯರು, ಬಾಣಂತಿಯರು, ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪೌಷ್ಠಿಕಾಂಶಭರಿತ ಆಹಾರಗಳನ್ನೇ ಸೇವಿಸಬೇಕೆಂದು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅಭಿಪ್ರಾಯಿಸಿದರು. ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣ ಪೋಷಣ್ ಭೀ ಫಡಾಯಿ ಭೀ ಕುರಿತು ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್ ಮಾಹಿತಿ ನೀಡಿದರು. ಇಲಾಖೆ ಮೇಲ್ವಿಚಾರಕರಾದ ಸಾವಿತ್ರವ್ವ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸಿದ್ದೇಗೌಡ, ಸ್ತ್ರೀ ಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ರೆಹನಾ ಫಿರೋಜ್, ಸ್ತ್ರೀ ಶಕ್ತಿ ಒಕ್ಕೂಟದ ತಾಲ್ಲೂಕು ಅಧ್ಯಕ್ಷೆ ಹೇಮಾ ಮತ್ತಿತರರು ಇದ್ದರು.








