
ಮಡಿಕೇರಿ ಸೆ.22 : ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಸಂಭ್ರಮ ಇಂದು ಆರಂಭಗೊಂಡಿತು. ಇತಿಹಾಸ ಪ್ರಸಿದ್ಧ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ನಗರದ ಪಂಪಿನ ಕೆರೆಯ ಬನ್ನಿ ಮಂಟಪದಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆಯನ್ನು ಸಲ್ಲಿಸಿ ಕರಗೋತ್ಸವದ ನಗರ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಹಾಲೇರಿ ರಾಜವಂಶಸ್ಥರ ಆಳ್ವಿಕೆಯ ಕಾಲದಿಂದ ನಡೆದುಕೊಂಡು ಬಂದಿರುವ ಮಡಿಕೇರಿಯ ದಸರಾ ಉತ್ಸವಕ್ಕೆ ಒಂದೂವರೆ ಶತಮಾನದ ಭವ್ಯ ಇತಿಹಾಸವಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ದಸರಾ ಉತ್ಸವದಲ್ಲಿ ಅಗ್ರ ಸ್ಥಾನವನ್ನು ನೀಡಲಾಗಿದೆ. ನವರಾತ್ರಿಯ ವಿಶೇಷವಾಗಿ ಕರಗಗಳ ನಗರ ಪ್ರದಕ್ಷಿಣೆ ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ನಗರದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಪಿ.ಚಾಮಿ, ಗೌಳಿಬೀದಿಯ ಶ್ರೀಕಂಚಿಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ಪಿ.ಸಿ.ಉಮೇಶ್, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಜಿ.ಎ.ಉಮೇಶ್ ಹಾಗೂ ಶ್ರೀಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಬಿ.ಅನೀಶ್ ಕುಮಾರ್ ಹೊರುವ ಮೂಲಕ ನಗರ ಪ್ರದಕ್ಷಿಣೆಯನ್ನು ಆರಂಭಿಸಿದರು. ನವರಾತ್ರಿ ಉತ್ಸವದ ಆರಂಭದ ಹಿನ್ನೆಲೆಯಲ್ಲಿ ನಾಲ್ಕು ಶಕ್ತಿದೇವತೆಗಳ ದೇವಸ್ಥಾನಗಳಿಂದ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಾಗ್ರಿಗಳನ್ನು ಹೊತ್ತು ಬನ್ನಿ ಮಂಟಪಕ್ಕೆ ತೆರಳಿ ಪೂಜಾ ವಿಧಿ-ವಿಧಾನಗಳೊಂದಿಗೆ ಅತ್ಯಾಕರ್ಷಕವಾಗಿ ಕರಗಗಳನ್ನು ಕಟ್ಟಿ ಹೂವುಗಳಿಂದ ಅಲಂಕರಿಸಿ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ಕರಗೋತ್ಸವ ಆರಂಭದ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಶಮಂಟಪ ಸಮಿತಿಯ ಅಧ್ಯಕ್ಷ ಹರೀಶ್ ಅಣ್ವೇಕರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ದಸರಾ ಸಮಿತಿ, ಉಪ ಸಮಿತಿ, ದೇವಾಲಯ ಸಮಿತಿಗಳ ಪ್ರಮುಖರು ಹಾಜರಿದ್ದರು. ಪಂಪಿನಕೆರೆ ಬಳಿಯಿಂದ ಹೊರಟ ನಾಲ್ಕು ಕರಗಗಳು ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯ, ಶ್ರೀಕನ್ನಿಕಾ ಪರಮೇಶ್ವರಿ ದೇಗುಲ ಹಾಗೂ ಸಂಪ್ರದಾಯದಂತೆ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮತ್ತು ಸ್ವೀಕರಿಸಿ ತಮ್ಮ ತಮ್ಮ ದೇವಾಲಯಗಳಿಗೆ ತೆರಳಿದವು.









