
ಮಡಿಕೇರಿ ಸೆ.23 NEWS DESK : ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕಾಂಗ್ರೆಸ್ ನಿಯಮಕ್ಕೆ ವಿರುದ್ಧವಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೆ.22 ರಂದು ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಅಪ್ರು ರವೀಂದ್ರ ಅವರು, ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಕಾಂಗ್ರೆಸ್ ಗೆ ವಿರುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಸೇರ್ಪಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಘಟಕದಿಂದ ನಡೆದ ಕಾರ್ಯಕ್ರಮ ಕಾಂಗ್ರೆಸ್ ಪಕ್ಷದ ಒಂದು ಭಾಗವಾಗಿದೆ. ಆದರೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಅಪ್ರು ರವೀಂದ್ರ ಅವರನ್ನು ಪಕ್ಷಕ್ಕೆ ಕರೆ ತರಲಾಗಿದೆ. ಪಕ್ಷ ಸೇರ್ಪಡೆ ಕುರಿತು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಮಾತ್ರವಲ್ಲದೆ ಕಾರ್ಯಕರ್ತರಿಗೂ ಮಾಹಿತಿ ನೀಡಿಲ್ಲ. ನಿಯಮ ಬಾಹಿರವಾಗಿರುವ ಈ ಬೆಳವಣಿಗೆ ಸಮಿತಿಯ ಸದಸ್ಯರು, ವಲಯ ಕಾಂಗ್ರೆಸ್ ಮತ್ತು ಬೂತ್ ಮಟ್ಟದ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಅಪ್ರು ರವೀಂದ್ರ ಅವರು ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ. ಆದ್ದರಿಂದ ಇವರ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿರುವ ಯಶ್ ದೋಲ್ಪಾಡಿ, ಕಾಂಗ್ರೆಸ್ ಮುಖಂಡರು ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.









