
ಮಡಿಕೇರಿ NEWS DESK ಸೆ.26 : ರಾಜ್ಯ ಸರಕಾರದ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ “ಕೊಡವ” ಎಂದು ನಮೂದಿಸಬೇಕು ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು ಮತ್ತು ಸರಕಾರದ ಗಮನ ಸೆಳೆಯಲು ಸೆ.30 ರಂದು ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 14ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಗುವುದು ಮತ್ತು ರಾಜ್ಯ ಸರಕಾರದ ವತಿಯಿಂದ ಅ.7ರ ವರೆಗೆ 15 ದಿನಗಳ ಕಾಲ ನಡೆಯಲಿರುವ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ “ಕೊಡವ” ಎಂದೇ ನಮೂದಿಸಬೇಕು ಎಂದು ಮಾನವ ಸರಪಳಿ ಸಂದರ್ಭ ಕರೆ ನೀಡಲಾಗುವುದೆಂದು ಹೇಳಿದ್ದಾರೆ. ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಸೇರಿದಂತೆ ಕೊಡವರ ಎಲ್ಲಾ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು. 2025-26ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.
ಕೊಡವ ಸಮುದಾಯದ ಹಕ್ಕೊತ್ತಾಯಗಳನ್ನು ಮಂಡಿಸಲು ಮತ್ತು ಜನಜಾಗೃತಿ ಮೂಡಿಸಲು ಮಾನವ ಸರಪಳಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲಿದೆ. ಬೇಂಗ್ ನಾಡಿನ ಚೇರಂಬಾಣೆಯ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.








