
ಮಡಿಕೇರಿ ಅ.9 NEWS DESK : ಇದೇ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವಾಟರ್ ಪ್ರೋಫ್ ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‍ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಹಾಡುಗಳನ್ನು ಮಾತ್ರ ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಸಾಂಸ್ಕøತಿಕ ಕಾಯಕ್ರಮ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ತಯಾರಿಯನ್ನು ವೀಕ್ಷಿಸಿ ಸರಿಯಾದದ್ದನ್ನು ಆಯ್ಕೆ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು. ಸ್ವಾಗತ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಸಾಂಸ್ಕøತಿಕ, ಉಪಾಹಾರ, ಬಹುಮಾನ, ಸ್ವಚ್ಚತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅ.24 ರೊಳಗೆ ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ವಿವಿಧ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವಂತಾಗಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲರೂ ಶ್ರಮಿಸಬೇಕು. ಕನ್ನಡಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಕನ್ನಡ ರಾಜ್ಯೋತ್ಸವ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ತಯಾರಿ ನಡೆಸಿ ಅಂತಿಮಗೊಳಿಸಿ ಮಾಹಿತಿ ನೀಡಲಾಗುವುದು ಎಂದರು. ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಶುಪಾಲನಾ ಇಲಾಖೆಯ ಉಪ ನಿದೇಶಕರಾದ ಲಿಂಗರಾಜ ದೊಡ್ಡಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜ್ಯೋತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಎಸ್.ಎಸ್.ದೀಪಕ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕರಾದ ಕುಮಾರ ಇತರರು ಇದ್ದರು.









